ಯಡ್ರಾಮಿ | ಮೂಲಭೂತ ಸೌಕರ್ಯ ವಂಚಿಸಿದ ಪಟ್ಟಣ ಪಂಚಾಯಿತಿ: ಬೀಗ ಜಡೆದು ಪಟ್ಟಣದ ಜನರಿಂದ ಪ್ರತಿಭಟನೆ

Update: 2026-07-22 20:41 IST

ಯಡ್ರಾಮಿ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಸೋಮವಾರ ಪಟ್ಟಣ ಪಂಚಾಯಿತಿ ಕಚೇರಿಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಕಚೇರಿ ಮುಖ್ಯ ದ್ವಾರಕ್ಕೆ ಬೀಗ ಜಡೆದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಲವು ಬಾರಿ ಮನವಿ ಸಲ್ಲಿಸಿದರೂ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ರಸ್ತೆ ದುರಸ್ತಿ, ಬೀದಿ ದೀಪ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಮಳೆಗಾಲ ಆರಂಭವಾದರೂ ಚರಂಡಿಗಳ ಪೈಪ್ ಒಡೆದ ಕಾರಣ ಮಳೆ ನೀರು ಮತ್ತು ಚರಂಡಿ ನೀರು ರಸ್ತೆಗಳಲ್ಲಿ ನೀರು ನಿಂತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಕಡೆ ಚರಂಡಿ ಸ್ವಚ್ಛತೆ ಇಲ್ಲದೆ ಹಲವೆಡೆ ಒಳಚರಂಡಿ ನೀರು ರಸ್ತೆಗೆ ಹರಿಯುತ್ತಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡದ ಕಾರಣ ದುರ್ವಾಸನೆ ಮತ್ತು ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ ಎಂದು ಪ್ರತಿಭಟನಾಕಾರರು ದೂರಿದರು.

ಪಟ್ಟಣ ಪಂಚಾಯಿತಿ ಆಡಳಿತ ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿಸುತ್ತಿದ್ದು ಅಧಿಕಾರಿಗಳು ಕಚೇರಿಯಲ್ಲಿದ್ದರೂ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತಕ್ಷಣವೇ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪರಿಸ್ಥಿತಿ ತಿಳಿದ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಪ್ರತಿಭಟನೆಯಲ್ಲಿ ಅಪ್ಪು ಗೌಡ ಮಾಲಿ ಪಾಟೀಲ, ಮಶಾಕ್, ರಿಯಾಜ್ ವಡಿಗೇರಿ, ಚನ್ನು ತಾಳಿಕೋಟಿ, ಇಮಾಮ್ ಅಲ್ಲಾಕೊಳ್, ಜಗದೀಶ್ ಲಗಲಿ ಸೇರಿದಂತೆ ವಿವಿಧ ವಾರ್ಡ್‌ಗಳ ನಿವಾಸಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News