ಯಡ್ರಾಮಿ: ಕಬ್ಬಿಗೆ ಪ್ರತಿ ಟನ್‌ಗೆ 3,600 ರೂ. ದರ ನಿಗದಿಪಡಿಸುವಂತೆ ಆಗ್ರಹಿಸಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ್ ಶುಗರ್ಸ್ ಸಕ್ಕರೆ ಕಾರ್ಖಾನೆ ಎದುರು ರೈತರು ಹಾಗೂ ವಿವಿಧ ರೈತಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರದಿದ್ದರೆ ನ.14ರಂದು ಕಾರ್ಖಾನೆಗೆ ಬೀಗ ಜಡಿದು ಬೃಹತ್ ಹೋರಾಟ ನಡೆಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಧರಣಿ ಸ್ಥಳಕ್ಕೆ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ರೈತರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡ ಈರಣ್ಣ ಭಜಂತ್ರಿ, ಸಕ್ಕರೆ ಕಾರ್ಖಾನೆಗಳು ಸಕ್ಕರೆ ಉತ್ಪಾದನೆಯಿಂದ ಮಾತ್ರವಲ್ಲದೆ ವಿದ್ಯುತ್, ಮೊಲಾಸಿಸ್ ಸೇರಿದಂತೆ ವಿವಿಧ ಉಪ ಉತ್ಪನ್ನಗಳಿಂದಲೂ ಕೋಟ್ಯಂತರ ರೂಪಾಯಿ ಆದಾಯ ಗಳಿಸುತ್ತಿವೆ. ಈ ಲಾಭದಲ್ಲಿ ಶೇ.75ರಷ್ಟು ರೈತರಿಗೆ ಹಾಗೂ ಶೇ.25ರಷ್ಟು ಕಾರ್ಖಾನೆಗಳಿಗೆ ಹಂಚಿಕೆಯಾಗಬೇಕು ಎಂದು ಆಗ್ರಹಿಸಿದರು.

ಬೇರೆ ಭಾಗಗಳ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್‌ಗೆ 3,800 ರಿಂದ 4,000 ರೂ. ವರೆಗೆ ದರ ನೀಡುತ್ತಿದ್ದರೆ, ನಮ್ಮ ಭಾಗದಲ್ಲಿ 3,600 ರೂ. ನೀಡಲೂ ಹಿಂದೇಟು ಹಾಕಲಾಗುತ್ತಿದೆ. ಇಳುವರಿ ಕುಸಿತ ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕಬ್ಬಿಗೆ ನ್ಯಾಯಯುತ ಬೆಲೆ ನೀಡಬೇಕು. 2017-18ರಿಂದಲೂ ಈ ಕುರಿತು ಮನವಿ ಸಲ್ಲಿಸುತ್ತಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ. ರೈತರಿಗೆ ನೀಡುವ ಸಾಲ ಮತ್ತು ಮುಂಗಡ ಹಣದ ವ್ಯವಹಾರದಲ್ಲಿಯೂ ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.

ನ.14ರಂದು ಕಾರ್ಖಾನೆಗೆ ಬೀಗ ಜಡಿದು ಹೋರಾಟ ನಡೆಸಲಾಗುವುದು. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಬೇಡಿಕೆ ಈಡೇರುವವರೆಗೂ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಮುಖಂಡರು ಎಚ್ಚರಿಸಿದರು.

ರೈತರ ಸಮಸ್ಯೆಗಳಿಗೆ ಮಾಧ್ಯಮಗಳು ಹೆಚ್ಚಿನ ಪ್ರಚಾರ ನೀಡಬೇಕು ಎಂದು ಈರಣ್ಣ ಭಜಂತ್ರಿ ಮನವಿ ಮಾಡಿದರು. ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಭಾರತೀಯ ಕೃಷಿಕ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ನೂರಾರು ರೈತರು ಭಾಗವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor