ಕಾಸರಗೋಡು | ರಸಮಂಜರಿ ಕಾರ್ಯಕ್ರಮದಲ್ಲಿ ನೂಕುನುಗ್ಗಲು; ಆರು ಮಂದಿ ವಿರುದ್ಧ ಪ್ರಕರಣ ದಾಖಲು
ಕಾಸರಗೋಡು: ನಗರ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುವಜನ ಸಂಘಟನೆಯಾದ ʼಫ್ಲೀʼ ನೇತೃತ್ವದಲ್ಲಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆ ಮೂರು ಸಾವಿರ ಮಂದಿಗೆ ಪ್ರವೇಶ ಪಾಸ್ ನೀಡುವಂತೆ ಪೊಲೀಸರು ಲಿಖಿತವಾಗಿ ಮುನ್ನೆಚ್ಚರಿಕೆ ನೀಡಿದ್ದರು. ಆದರೆ ಹತ್ತು ಸಾವಿರ ಮಂದಿಗೆ ಪಾಸ್ ನೀಡಲಾಗಿತ್ತು ಎನ್ನಲಾಗಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ.
ಕಾರ್ಯಕ್ರಮದ ವೇಳೆ ನೂಕು ನುಗ್ಗಲು ಉಂಟಾಗಿ ಹದಿನಾರು ಮಂದಿ ಗಾಯಗೊಂಡಿದ್ದರು. ಈ ವೇಳೆ ಮೈದಾನದ ಹೊರಗಡೆ ಸೇರಿದ್ದವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಗಾಯಕ ಹನಾನ್ ಶಾ ನೇತೃತ್ವದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮಕ್ಕೆ ಐದು ಸಾವಿರಕ್ಕೂ ಅಧಿಕ ಮಂದಿ ಆಗಮಿಸುವ ಸಾಧ್ಯತೆ ಇರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದರು. ಆದರೆ ಮೂರು ಸಾವಿರ ಮಂದಿಗೆ ಮಾತ್ರ ಅನುಮತಿ ನೀಡುವಂತೆ ಪೊಲೀಸರು ಆಯೋಜಕರಿಗೆ ಮುನ್ನೆಚ್ಚರಿಕೆ ನೀಡಿದ್ದರು. ಪೊಲೀಸರು ನೀಡಿದ ಮುನ್ನೆಚ್ಚರಿಕೆಯನ್ನು ಉಲ್ಲಂಘಿಸಿ ಹತ್ತು ಸಾವಿರಕ್ಕೂ ಅಧಿಕ ಮಂದಿಗೆ ಪಾಸ್ ವಿತರಿಸಲಾಗಿತ್ತು. ಇದರ ಪರಿಣಾಮ ಸಾವಿರಾರು ಮಂದಿ ಕಾರ್ಯಕ್ರಮ ವೀಕ್ಷಣೆಗೆ ಸ್ಥಳಕ್ಕೆ ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.