ಅರೆಭಾಷೆ ಸಂಸ್ಕೃತಿ-ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರಕಟ
ಮಡಿಕೇರಿ, ಮಾ.2: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ.
ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪುತ್ತೂರಿನ ಅನಂತರಾಜ ಗೌಡ, ಅರೆಭಾಷಿಕ ಸಂಘಟನಾ ಕ್ಷೇತ್ರದಲ್ಲಿ ಬೆಳ್ತಂಗಡಿಯ ಲೋಕೇಶ್ವರಿ ವಿನಯಚಂದ್ರ ಹಾಗೂ ಅರೆಭಾಷೆ ಸಾಹಿತ್ಯ ಕ್ಷೇತ್ರದಲ್ಲಿ ಮಡಿಕೇರಿಯ ಕಟ್ರತನ ಲಲಿತಾ ಅಯ್ಯಣ್ಣ ಅವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಮಾರ್ಚ್ 14ರಂದು ಮಂಗಳೂರಿನ ಉರ್ವಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 50 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಅಂದು ನಡೆಯುವ ಸಮಾರಂಭದಲ್ಲಿ ಅಕಾಡಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ