×
Ad

ಮಡಿಕೇರಿ ಸಮೀಪ ಹೆದ್ದಾರಿ ತಡೆಗೋಡೆಯಲ್ಲಿ ಬಿರುಕು : ನಿವಾಸಿಗಳ ಸ್ಥಳಾಂತರ

Update: 2025-07-31 14:24 IST

ಮಡಿಕೇರಿ ಜು.31 : ನಿರಂತರ ಮಳೆಯಿಂದ ಮಡಿಕೇರಿ- ಸಂಪಾಜೆ ಹೆದ್ದಾರಿಯ ಬೃಹತ್ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ತಡೆಗೋಡೆ ಕೆಳಭಾಗದ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ 2018 ರಲ್ಲಿ ಸಂಭವಿಸಿದ ಜಲಸ್ಫೋಟ ಮತ್ತು ಭೂಕುಸಿತದಲ್ಲಿ ಹಲವು ಪ್ರದೇಶಗಳು ಅಪಾಯಕ್ಕೆ ಸಿಲುಕಿದ್ದವು. ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು. ಆದರೆ ಕಳೆದ ಒಂದು ತಿಂಗಳಿನಿಂದ ಮಡಿಕೇರಿ ತಾಲ್ಲೂಕಿನಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮಂಗಳೂರು ರಸ್ತೆಯ ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಸುರಕ್ಷತೆಯ ದೃಷ್ಟಿಯಿಂದ ತಡೆಗೋಡೆ ಕೆಳಭಾಗದ ನಿವಾಸಿಗಳನ್ನು ರೆಡ್ ಕ್ರಾಸ್ ಸಂಸ್ಥೆಯ ಭವನಕ್ಕೆ ಸ್ಥಳಾಂತರಿಸಿದ್ದಾರೆ. ರೆಡ್ ಕ್ರಾಸ್ ಭವನದಲ್ಲಿ ಆಶ್ರಯ ಪಡೆದಿರುವ ನಿವಾಸಿಗಳನ್ನು ಕಂದಾಯ ಇಲಾಖೆ ಹಾಗೂ ನಗರಸಭೆಯ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬಿದರು. ಊಟ, ಉಪಹಾರ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿ ಭೇಟಿ: ತಡೆಗೋಡೆಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ವಾಹನಗಳ ಸುರಕ್ಷಿತ ಮತ್ತು ಸುಗಮ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.

ಭಾರೀ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ಈಗಾಗಲೇ ನಿಷೇಧಿಸಿದೆ.

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News