ಕೊಡಗು SP ಬಿಂದುಮಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ
ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಆರ್.ಎನ್. ಬಿಂದುಮಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಇತ್ತೀಚೆಗಷ್ಟೇ ಕೊಡಗು ಎಸ್‌ಪಿಯಾಗಿ ಅಧಿಕಾರ ವಹಿಸಿಕೊಂಡ ಬಿಂದುಮಣಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ‘ಬಿಂದು ಮಣಿ ಐಪಿಎಸ್, ಎಸ್‌ಪಿ ಕೊಡಗು ಡಿಸ್ಟ್ರಿಕ್ಟ್’ ಎಂಬ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಸೈಬರ್ ವಂಚಕರು, ಜನವರಿ 9 ರಿಂದ ಅನೇಕ ಪತ್ರಕರ್ತರು, ಪ್ರಮುಖ ವ್ಯಕ್ತಿಗಳು ಹಾಗೂ ಸಾರ್ವಜನಿಕರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ.
ವಂಚಕರು ಸೃಷ್ಟಿಸಿರುವ ಈ ಪ್ರೊಫೈಲ್ ‘ಲಾಕ್’ ಆಗಿರುವುದು ಕಂಡುಬಂದಿದೆ. ಅಧಿಕಾರಿಗಳ ಹೆಸರಿನಲ್ಲಿ ಹಣದ ಬೇಡಿಕೆ ಅಥವಾ ಇನ್ಯಾವುದೇ ಮಾಹಿತಿ ಕೇಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಇಂತಹ ರಿಕ್ವೆಸ್ಟ್‌ಗಳನ್ನು ಸ್ವೀಕರಿಸಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಈಗಾಗಲೇ ಸೈಬರ್ ಪೊಲೀಸರು ಈ ನಕಲಿ ಖಾತೆಯ ಮೂಲವನ್ನು ಪತ್ತೆ ಹಚ್ಚಲು ತನಿಖೆ ಪ್ರಾರಂಭಿಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.