ಸೋಮವಾರಪೇಟೆ | ಕಲ್ಲುಗಣಿಗಾರಿಕೆಯಿಂದ ಆರೋಗ್ಯ ಸಮಸ್ಯೆ ಆರೋಪ; ದಯಾಮರಣ ನೀಡಲು ಹೊಸಳ್ಳಿ ಗ್ರಾಮಸ್ಥರ ಆಗ್ರಹ
ಮಡಿಕೇರಿ: ಸೋಮವಾರಪೇಟೆ ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ ಎಂದು ಹೊಸಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.
ತಾಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ನೇತೃತ್ವದಲ್ಲಿ ವಿವಿಧ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹೊಸಳ್ಳಿ ಗ್ರಾಮದಲ್ಲಿ ಗುರುವಾರ ನಡೆದ ಸಭೆಯಲ್ಲಿ ಕಲ್ಲುಗಣಿಗಾರಿಕೆಯ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಲುಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದರು.
ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿವೆ. ಇಲ್ಲಿನ ಜನರ ಬದುಕು ದುಸ್ತರವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.
ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕಳೆದ ಹಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಈ ಭಾಗದಲ್ಲಿ ಸಿ ಮತ್ತು ಡಿ ವರ್ಗದ ಜಮೀನಿದೆ. ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಲ್ಪಟ್ಟಿರುವ ಜೇನುಕಲ್ಲು ಬೆಟ್ಟ ಹತ್ತಿರದಲ್ಲೇ ಇದೆ. ಕ್ರಷರ್ಗೆ ಸಂಬಂಧಿಸಿದಂತೆ ಹತ್ತಾರು ನಿಯಮಗಳಿದ್ದರೂ ಎಲ್ಲವನ್ನೂ ಗಾಳಿಗೆ ತೂರಿ ಗಣಿಗಾರಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.
ಸಭೆಯಲ್ಲಿ ಕೇಳಿ ಬಂದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ, ಕಾನೂನಿನನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ತಿಳಿಸಿದರು.
ಈಗಲೇ ಗಣಿಗಾರಿಕೆ ನಡೆಯುತ್ತಿರುವ ಸ್ಥಳವನ್ನು ಪರಿಶೀಲನೆ ಮಾಡಿ ಎಂದು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದರು. ಗ್ರಾಮಸ್ಥರ ಕೋರಿಕೆಯಂತೆ ಎಲ್ಲ ಗಣಿಗಾರಿಕೆ ಸ್ಥಳವನ್ನು ಪರಿಶೀಲನೆ ಮಾಡಲಾಯಿತು. ದಾಖಲೆ ಪರಿಶೀಲಿಸಿ ನಿಯಮ ಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ತಹಶೀಲ್ದಾರ್ ಆದೇಶಿಸಿದರು. ಬಾಕಿ ಉಳಿದ ಕೋರೆಗಳನ್ನು ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ, ಲೋಪದೋಷ ಕಂಡು ಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಕೃಷ್ಣಮೂರ್ತಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿನೋದ್, ಠಾಣಾಧಿಕಾರಿ ಮುದ್ದುಮಹದೇವ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಕುಮಾರ್, ಆರ್ಟಿಒ, ಸರ್ವೇ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಬಾಕ್ಸ್,,,,
ಮನೆಗಳು ಬಿರುಕು:
ಗ್ರಾಮೀಣ ರಸ್ತೆಯಲ್ಲಿ ಹತ್ತು ಚಕ್ರದ ಟಿಪ್ಪರ್ಗಳು ಓಡಾಡುತ್ತಿವೆ. ಸಂಜೆ ವೇಳೆ ಎಲ್ಲ ಕೋರೆಗಳಲ್ಲಿ ಸ್ಫೋಟಕ ಬಳಸಲಾಗುತ್ತಿದೆ. ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟಿವೆ. ಕ್ರಷರ್ಗಳಿಂದ ಧೂಳು ಬರುತ್ತಿದ್ದು, ವ್ಯವಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಶ್ವಾಸಕೋಶದ ಸಮಸ್ಯೆಯಿಂದ ಜನರ ಜೀವನ ನರಕವಾಗಿದೆ. ಅಧಿಕಾರಿಗಳೇ ಮುತುವರ್ಜಿ ವಹಿಸಿ ಈ ಭಾಗದ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.