×
Ad

ಕರ್ನಾಟಕ ಕೇವಲ ನೆಲವಲ್ಲ ಅದು ಕನ್ನಡಿಗರ ಭಾವನೆ, ಬಾಂಧವ್ಯವಾಗಿದೆ : ಸಚಿವ ಎನ್.ಎಸ್.ಭೋಸರಾಜು

ಮಡಿಕೇರಿಯಲ್ಲಿ ʼಕರ್ನಾಟಕ ರಾಜ್ಯೋತ್ಸವʼ ದಿನಾಚರಣೆ

Update: 2025-11-01 15:33 IST

ಮಡಿಕೇರಿ : ಕರ್ನಾಟಕ ಎಂಬುವುದು ಕೇವಲ ನೆಲವಲ್ಲ, ಅದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಸಂಭ್ರಮದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಚಿವರು ಮಾತನಾಡಿದರು.

ಕನ್ನಡ, ಕರ್ನಾಟಕ, ಕರುನಾಡು ಎಂಬುವುದು ಕೇವಲ ನೆಲ ಮತ್ತು ಭಾಷೆಯಲ್ಲ. ಅದು ಕನ್ನಡಿಗರ ಭಾವನೆ ಹಾಗೂ ಬಾಂಧವ್ಯವಾಗಿದ್ದು, ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದರು.

ದೇಶದಲ್ಲಿ ಕನ್ನಡ ಭಾಷಾ ಸಾಹಿತ್ಯಕ್ಕೆ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ದೊರೆತ್ತಿರುವುದು ಹೆಮ್ಮೆಯ ವಿಚಾರ. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನಗಳನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸಿಕೊಳ್ಳಬೇಕು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಕೊಡಗು ಜಿಲ್ಲೆ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ನಾಡು-ನುಡಿಗೆ ವಿಶೇಷ ಆದ್ಯತೆ ನೀಡಿರುವುದು ವಿಶೇಷವಾಗಿದೆ. ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಗ್ಯಾರಂಟಿ ಯೋಜನೆಗಳ ಜತೆಗೆ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳು ಎಂದಿನಂತೆ ನಡೆಯುತ್ತಿವೆ. ಆ ದಿಸೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಮೂಲ ಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.

ಪೊಲೀಸ್ ಘಟಕ, ಎನ್‍ಸಿಸಿ, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಮತ್ತಿತರ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ನಡೆದ ಕನ್ನಡ ನಾಡು, ನುಡಿಯ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ವಿವಿಧ ಇಲಾಖೆಗಳ ವತಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರಗಳು ಪ್ರದರ್ಶನಗೊಂಡವು.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News