ಮಡಿಕೇರಿ : ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಮೃತ್ಯು
Update: 2024-03-13 19:08 IST
ಸಾಂದರ್ಭಿಕ ಚಿತ್ರ
ಮಡಿಕೇರಿ: ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಚೆನ್ನಂಗಿ ಬಳಿಯ ಅಬ್ಬೂರು ಗ್ರಾಮದಲ್ಲಿ ವರದಿಯಾಗಿದೆ.
ಮೃತ ಮಹಿಳೆಯನ್ನು ಅಸ್ಸಾಂ ಮೂಲದ ಅಜಬಾನು (37) ಎಂದು ಗುರುತಿಸಲಾಗಿದ್ದು, ಸ್ಥಳೀಯ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭ ತೀವ್ರವಾಗಿ ಗಾಯಗೊಂಡ ಅಜಬಾನು ಅವರನ್ನು ಪಾಲಿಬೆಟ್ಟ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎನ್ನಲಾಗಿದೆ.
ಘಟನೆಯಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು ಹಾಗೂ ಕಾರ್ಮಿಕರು ಅರಣ್ಯ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ಮುಗ್ಧ ಜೀವಗಳು ಬಲಿಯಾಗುತ್ತಿವೆ. ಅರಣ್ಯ ಅಧಿಕಾರಿಗಳು ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸಬೇಕು ಎಂದು ಒತ್ತಾಯಿಸಿದರು.