ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ತೋಟದ ಮಾಲೀಕರೊಬ್ಬರು ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ತಾರಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ತಾರಿಕಟ್ಟೆ ನಿವಾಸಿ ಕೇಶವಯ್ಯ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಗುರುವಾರ ಬೆಳಿಗ್ಗೆ ಕೇಶವಯ್ಯ ಅವರು ತಮ್ಮ ತೋಟದ ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಸಂದರ್ಭ ಕಾಡಾನೆ ಏಕಾಏಕಿ ಅವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ಕೇಶವಯ್ಯ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿ ಬಾರಿ ಆನೆ ದಾಳಿಯಿಂದ ಸಾವು ಸಂಭವಿಸಿದಾಗ ಮಾತ್ರ ಅಧಿಕಾರಿಗಳು ಬಂದು ಭರವಸೆ ಕೊಟ್ಟು ಹೋಗುತ್ತಾರೆ. ಆದರೆ ಕಾಡಾನೆ ದಾಳಿ ನಿರಂತರವಾಗಿದೆ, ಸಮಸ್ಯೆಗೆ ಶಾಶ್ವತ ಪರಿಹಾರ ಬೇಕಾಗಿದೆ ಎಂದರು.

ಅರಣ್ಯ ಇಲಾಖೆ ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಬೇಕು. ಕಾಡಾನೆ ಹಾವಳಿ ಇರುವ ಪ್ರದೇಶಗಳಲ್ಲಿ ಸೋಲಾರ್ ಬೇಲಿಗಳ ನಿರ್ಮಾಣ ಮಾಡಿ ಸೂಕ್ತ ರೀತಿಯಲ್ಲಿ ನಿರ್ವಹಣೆಯನ್ನೂ ಮಾಡಬೇಕು. ಮೃತ ಕೇಶವಯ್ಯ ಅವರ ಕುಟುಂಬಕ್ಕೆ ಸೂಕ್ತ ಹಾಗೂ ತಕ್ಷಣದ ಪರಿಹಾರ ನೀಡಬೇಕು. ಗ್ರಾಮದಲ್ಲಿ ಅರಣ್ಯ ಇಲಾಖೆಯ ಗಸ್ತು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಸೆರೆ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಎಸ್.ಕೆ. ಲಕ್ಷ್ಮೀಶ್/ವಾರ್ತಾಭಾರತಿ

ಕೊಡಗು ಜಿಲ್ಲಾ ವರದಿಗಾರರು

ಲಕ್ಷ್ಮೀನಾರಾಯಣ ಎಸ್.ಕೆ ಅವರು ಕಳೆದ 25 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ವಿವಿಧ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಕಾರ್ಯನಿರ್ವಹಣೆ ಮಾಡಿದ್ದಾರೆ. ಪ್ರಸ್ತುತ “ವಾರ್ತಾಭಾರತಿ” ಕನ್ನಡ ದಿನಪತ್ರಿಕೆಯ ಕೊಡಗು ಜಿಲ್ಲಾ ವರದಿಗಾರರಾಗಿ ಕಳೆದ 16 ವರ್ಷಗಳಿಂದ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.