ಬಂಗಾರಪೇಟೆ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಘಟನೆಯನ್ನು ಖಂಡಿಸಿ ಸಾವಿರಾರು ಮಂದಿ ಆಸ್ಪತ್ರೆ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವ ಇತರರಿದ್ದರೆ ಅವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಾವಿರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ, ಬಂಗಾರಪೇಟೆ ಸರ್ಕಲ್ ಇನ್‌ಸ್ಪೆಕ್ಟರ್ ರವಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ನಂತರ ಶಾಸಕ ಎಸ್ಎನ್ ನಾರಾಯಣಸ್ವಾಮಿ, ಮುಖಂಡ ಶಂಶುದ್ದೀನ್ ಬಾಬು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor