ಕಾಡಾನೆಗಳನ್ನು ಎಲ್ಲಿಗೆ ಸ್ಥಳಾಂತರಿಸಬೇಕೆಂಬುದನ್ನು ಚಿಕ್ಕಮಗಳೂರು ಭಾಗದ ಶಾಸಕರೇ ನಿರ್ಧರಿಸಲಿ : ಸಚಿವ ರಾಮಲಿಂಗಾರೆಡ್ಡಿ
"ಶಾಸಕರು ನೀಡುವ ಸಲಹೆಯಂತೆ ಮುಂದಿನ ಕ್ರಮ"
ಸಚಿವ ರಾಮಲಿಂಗಾರೆಡ್ಡಿ
ಕೋಲಾರ: ಬೇಲೂರು ಭಾಗದಲ್ಲಿ ಜನರಿಗೆ ತೊಂದರೆ ನೀಡುತ್ತಿರುವ ಕಾಡಾನೆಗಳನ್ನು ಎಲ್ಲಿಗೆ ಸ್ಥಳಾಂತರಿಸಬೇಕು ಎಂಬುದನ್ನು ಚಿಕ್ಕಮಗಳೂರು ಭಾಗದ ಶಾಸಕರೇ ನಿರ್ಧರಿಸಲಿ. ಶಾಸಕರು ನೀಡುವ ಸಲಹೆಯಂತೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಲೂರು ತಾಲ್ಲೂಕಿನಲ್ಲಿ ಸುಮಾರು 55 ಕಾಡಾನೆಗಳಿದ್ದು, ಅವುಗಳಿಗೆ ಹೋಲಿಸಿದರೆ ಅರಣ್ಯ ಪ್ರದೇಶದ ಪ್ರಮಾಣ ಕಡಿಮೆಯಾಗಿದೆ. ಇಲ್ಲಿ ಕೇವಲ 13,917 ಎಕರೆ ಅರಣ್ಯ ಪ್ರದೇಶವಿದ್ದು, ಅದು ಕೂಡ ಒಂದೇ ಪ್ರದೇಶದಲ್ಲಿ ಇರದೆ ಕಾಫಿ ತೋಟಗಳ ನಡುವೆ ಚದುರಿಹೋಗಿದೆ. ಹೀಗಾಗಿ ಕಾಡಾನೆಗಳು ಆಹಾರ ಅರಸಿ ನಾಡಿಗೆ ಬಂದು ಬೆಳೆ ಹಾನಿ ಹಾಗೂ ಪ್ರಾಣಹಾನಿಗೆ ಕಾರಣವಾಗುತ್ತಿವೆ. 2019ರಲ್ಲಿ ಕೇವಲ 7 ಇದ್ದ ಆನೆಗಳ ಸಂಖ್ಯೆ ಈಗ 55ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.
ಕಾಡಾನೆಗಳನ್ನು ಸುಮಾರು 1.41 ಲಕ್ಷ ಎಕರೆ ವಿಸ್ತೀರ್ಣದ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ, ಈ ಪ್ರಸ್ತಾವನೆಗೆ ಚಿಕ್ಕಮಗಳೂರು ಭಾಗದ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳಾಂತರಿಸಿದ ಆನೆಗಳು ಮತ್ತೆ ನಾಡಿಗೆ ಬಾರದಂತೆ ಅಗತ್ಯ ಭದ್ರತಾ ಕ್ರಮ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದರೂ ಶಾಸಕರು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎಂದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶಾಸಕರ ಸಭೆ ಕರೆದು ಚರ್ಚಿಸಲಾಗುವುದು. ಬೇಲೂರು ಮತ್ತು ಚಿಕ್ಕಮಗಳೂರು ಭಾಗದ ಜನರಿಗೆ ಯಾವುದೇ ತೊಂದರೆಯಾಗದಂತೆ ಶಾಸಕರೇ ಸೂಕ್ತ ಪರಿಹಾರ ಸೂಚಿಸಿದರೆ, ಅದರಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಪ್ರತಿ ವರ್ಷ ಆನೆ, ಹುಲಿ, ಚಿರತೆ ಸೇರಿದಂತೆ ವನ್ಯಜೀವಿಗಳ ದಾಳಿಯಿಂದ ಸರಾಸರಿ 40ರಿಂದ 45 ಮಂದಿ ಮೃತಪಟ್ಟಿದ್ದಾರೆ. ಇಂತಹ ಘಟನೆಗಳನ್ನು ತಡೆಗಟ್ಟಲು ಸರ್ಕಾರ ಗಂಭೀರ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಮೇಕೆದಾಟು ಯೋಜನೆ ಜಾರಿಯಾಗಲೇಬೇಕು:
ಮೇಕೆದಾಟು ಯೋಜನೆ ಜಾರಿಯಾಗಲೇಬೇಕು. ಇದರಲ್ಲಿ ಎರಡನೇ ಮಾತಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದರಿಂದ ಯೋಜನೆಗೆ ತಮಿಳುನಾಡಿನ ಅನುಮತಿ ಅಗತ್ಯವಿಲ್ಲ. ಕೇಂದ್ರ ಸರ್ಕಾರದಿಂದ ಪರಿಸರ ಅನುಮತಿ ಪಡೆದು ಯೋಜನೆ ಆರಂಭಿಸಲಾಗುವುದು ಎಂದು ಹೇಳಿದರು.
ಈ ಯೋಜನೆಯಿಂದ ತಮಿಳುನಾಡಿನ ರೈತರಿಗೂ ಅನುಕೂಲವಾಗಲಿದೆ. ಆದರೆ, ಅವರು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
2027ಕ್ಕೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು:
ಎತ್ತಿನಹೊಳೆ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ದೊಡ್ಡಬಳ್ಳಾಪುರದ ಬಳಿ ಪಂಪಿಂಗ್ ಸ್ಟೇಷನ್ ನಿರ್ಮಿಸಲಾಗುತ್ತಿದೆ. ತಮ್ಮ ಮಾಹಿತಿಯ ಪ್ರಕಾರ, 2027ರ ವೇಳೆಗೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅನುದಾನ ಬಿಡುಗಡೆಗೆ ಆಗ್ರಹಿಸಿ ಶ್ರೀನಿವಾಸಪುರ ಶಾಸಕ ವೆಂಕಟಶಿವಾರೆಡ್ಡಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕರು ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಚಾರ ತಮ್ಮ ಗಮನಕ್ಕೆ ಬಂದಿಲ್ಲ. ಸಂಬಂಧಪಟ್ಟವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.