Kolar | ಭೀಕರ ರಸ್ತೆ ಅಪಘಾತ: ಇಬ್ಬರು ಮೃತ್ಯು
ಕೋಲಾರ : ವೇಗವಾಗಿ ಬಂದ ಕಾರೊಂದು ಆಟೋಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತೂಪಲ್ಲಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಲಕ್ಷ್ಮಿಪುರ ಗ್ರಾಮದ ಯಾಸ್ಮೀನ್ (35) ಮತ್ತು ಹರಳಕುಂಟೆ ಗ್ರಾಮದ ಶಬ್ಬೀರ್ ಭಾಷಾ (40) ಎಂದು ಗುರುತಿಸಲಾಗಿದೆ.
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ, ಹಿಂದಿನಿಂದ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಯಾಸ್ಮೀನ್ ಹಾಗೂ ಶಬ್ಬೀರ್ ಭಾಷಾ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ರಾಯಲ್ಪಾಡು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.