ಕೋಲಾರ: ಎಸ್ಐಆರ್ ಬಗ್ಗೆ ಜಾಗೃತಿಗಾಗಿ ಸೈಕಲ್ ಜಾಥಾ
ಕೋಲಾರ, ಜು.3 : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್ಐಆರ್) ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ (SVEEP) ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಇಂದು ಬೆಳಗ್ಗೆ ಕೋಲಾರ ನಗರದಲ್ಲಿ ‘ಸೈಕಲ್ ಜಾಥಾ ಆಯೋಜಿಸಲಾಗಿತ್ತು.
ನಗರದ ಐಬಿ (ಬಂಗಾರಪೇಟೆ ಸರ್ಕಲ್) ನಿಂದ ಪ್ರಾರಂಭವಾದ ಈ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಂಟಿಯಾಗಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, “ಪ್ರಜಾಪ್ರಭುತ್ವದ ಯಶಸ್ಸು ಮತದಾರರ ಸಕ್ರಿಯ ಭಾಗವಹಿಸುವಿಕೆಯ ಮೇಲೆ ಅವಲಂಬಿತವಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅಭಿಯಾನವು ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಒಂದು ಸುಸಂದರ್ಭವಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕನು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಜವಾಬ್ದಾರಿಯುತ ಮತದಾರರಾಗಬೇಕು” ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಪ್ರವೀಣ್ ಪಿ. ಬಾಗೇವಾಡಿ ಮಾತನಾಡಿ, "ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ನೋಂದಾಯಿಸಿಕೊಳ್ಳುವುದು ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ-2026ರ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಮೂಲಕ, ಪ್ರಜಾಪ್ರಭುತ್ವದ ಅಡಿಪಾಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ" ಎಂದು ತಿಳಿಸಿದರು.
ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ನಗರಸಭೆ ಅಧಿಕಾರಿ ಹಾಗೂ ಸಿಬ್ಬಂದಿ ಉತ್ಸಾಹದಿಂದ ಸೈಕಲ್ ಜಾಥಾದಲ್ಲಿ ಪಾಲ್ಗೊಂಡರು.
ಜಾಥಾದ ಉದ್ದಕ್ಕೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವ, ತಿದ್ದುಪಡಿ ಮಾಡುವ ಹಾಗೂ ಪಟ್ಟಿಯಿಂದ ಹೆಸರು ಪರಿಶೀಲಿಸಿಕೊಳ್ಳುವ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.