ಕೋಲಾರ : ಚೆನ್ನೈ–ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೊಯೋಟಾ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಮುಗಿಸಿ ಬೆಂಗಳೂರಿನತ್ತ ವಾಪಸ್ಸಾಗುತ್ತಿದ್ದ ಕಾರು ಬೆಳಗ್ಗೆ ಸುಮಾರು 7 ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸಿಗಳಾದ ಶಾರದಮ್ಮ (70), ದೀಕ್ಷಿತಾ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ವಿಕಾಸ್, ನೀತು, ಆದ್ವಿಕ ಮತ್ತು ಕವಿತಾ ಗಾಯಗೊಂಡಿದ್ದು, ಅವರನ್ನು ಬಂಗಾರಪೇಟೆ ಹಾಗೂ ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಯಿ ಅಡ್ಡ ಬಂದಿದ್ದೇ ಅಪಘಾತಕ್ಕೆ ಕಾರಣ? :

ಕಾರು ಚಲಾಯಿಸುತ್ತಿದ್ದ ವಿಕಾಸ್ ಅವರ ಪ್ರಾಥಮಿಕ ಹೇಳಿಕೆಯ ಪ್ರಕಾರ, ಏಕಾಏಕಿ ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ವಾಹನವನ್ನು ಪಕ್ಕಕ್ಕೆ ತಿರುಗಿಸುವ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಬೆತ್ತಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor