ಬಸವಣ್ಣನವರನ್ನು ಅವಹೇಳನ ಮಾಡಿದ ವ್ಯಕ್ತಿಯ ಬಂಧನಕ್ಕೆ ಕ್ರಮ : ಸಚಿವ ಶಿವರಾಜ್ ತಂಗಡಗಿ
ಶಿವರಾಜ್ ತಂಗಡಗಿ
ಕೊಪ್ಪಳ : ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿಯಾಗಿ ಬರೆದಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.
ಶನಿವಾರ ಜಿಲ್ಲೆಯ ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ಬಗ್ಗೆ ಮಾತನಾಡುವ ಯೋಗ್ಯತೆ ಇದೆಯೇ ಎಂಬುದನ್ನು ಇಂತಹವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಸವಣ್ಣನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ, ಅಂತಹ ವಿಚಾರಗಳನ್ನು ಒಳಗೊಂಡಿರುವ ಪುಸ್ತಕವನ್ನು ನಿಷೇಧಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ನಾಡಿನ ಮಹನೀಯರ ಬಗ್ಗೆ ಅಲ್ಲೊಬ್ಬರು, ಇಲ್ಲೊಬ್ಬರು ಅವಿವೇಕದಿಂದ ಮಾತನಾಡುವ ಪ್ರವೃತ್ತಿ ತೋರುತ್ತಿದ್ದಾರೆ. ಇಂತಹ ಹೇಳಿಕೆಗಳು ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೆ, ಮಹನೀಯರ ಆದರ್ಶಗಳಿಗೆ ಅಪಮಾನ ಮಾಡಿದಂತಾಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಯಾರೂ ಇತಿಹಾಸ ಪುರುಷರು ಹಾಗೂ ಸಮಾಜ ಸುಧಾರಕರ ಗೌರವಕ್ಕೆ ಧಕ್ಕೆ ತರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಬಸವಣ್ಣ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಇಡೀ ಸಮಾಜಕ್ಕೆ ಸಮಾನತೆ, ಕಾಯಕ ಮತ್ತು ಮಾನವೀಯತೆಯ ಸಂದೇಶ ಸಾರಿದ ಮಹಾನ್ ಚೇತನ. ಅವರ ವಿಚಾರಧಾರೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಹೀಗಾಗಿಯೇ ರಾಜ್ಯ ಸರಕಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದರು.