ಕನಕಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಗಳನ್ನು ಖಂಡಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನಸಾಮಾನ್ಯರ ಮೇಲಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸುವಂತೆ ಆಗ್ರಹಿಸಿ ಬಿಜೆಪಿ ಕನಕಗಿರಿ ಮಂಡಲದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಮೌನೇಶ ಧಡೇಸೂಗೂರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಅಗತ್ಯ ವಸ್ತುಗಳು ಹಾಗೂ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಆರೋಪಿಸಿದರು.

ಮಾಜಿ ಮಂಡಲ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ ಮಾತನಾಡಿ, ಈಗಾಗಲೇ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಬಡವರು, ಮಧ್ಯಮ ವರ್ಗದ ಕುಟುಂಬಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಸ್ಥರ ಮೇಲೆ ಬೆಲೆ ಏರಿಕೆಯ ಹೊರೆ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಕುಟುಂಬದ ಬಜೆಟ್ ಸಂಪೂರ್ಣ ಏರುಪೇರಾಗಿದೆ. ಸರ್ಕಾರ ತನ್ನ ನೀತಿಗಳಿಂದ ಜನರ ಮೇಲಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಾರ್ಯಾಲಯದಿಂದ ಮಹರ್ಷಿ ವಾಲ್ಮೀಕಿ ವೃತ್ತದವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಉಪತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ, ಮಾಜಿ ಅಧ್ಯಕ್ಷ ಮಾಹಾಂತೇಶ ಸಜ್ಜನ, ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಮಂಜುನಾಥ್ ಯತ್ನಟ್ಟಿ, ಜಿಲ್ಲಾ ಎಸ್‌ಸಿ ಮೋರ್ಚಾ ಕಾರ್ಯದರ್ಶಿ ಲಿಂಗಪ್ಪ ಪೂಜಾರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗ್ಯಾನಪ್ಪ ಗಾಣದಾಳ ಮತ್ತು ಪ್ರಕಾಶ್ ಹಾದಿಮನಿ, ಮಂಡಲ ಉಪಾಧ್ಯಕ್ಷರಾದ ರಂಗಪ್ಪ ಕೊರಗಟಗಿ, ಕನಕಪ್ಪ ಯಾದವ್ ಹಾಗೂ ನಿಂಗಪ್ಪ ನಾಯಕ, ಪಟ್ಟಣ ಪಂಚಾಯಿತಿ ಸದಸ್ಯ ಸುರೇಶಪ್ಪ ಗುಗ್ಗಳಶೆಟ್ಟಿ, ಹನುಮಂ ಬಸರಿಗಿಡದ್, ಶೇಷಪ್ಪ ಪೂಜಾರ, ಎಸ್‌ಸಿ ಮೋರ್ಚಾ ಅಧ್ಯಕ್ಷ ರವಿ ಭಜಂತ್ರಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಚಿದಾನಂದ ನಾಯಕ, ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ರಾಮದುರ್ಗ ಮತ್ತು ವೆಂಕಟೇಶ್ ಸಂಕನಾಳ, ಯುವಮೋರ್ಚಾ ಅಧ್ಯಕ್ಷ ವಿನಾಯಕ ಚಿತ್ತರಕಿ, ಉಪಾಧ್ಯಕ್ಷ ತಿಮ್ಮನಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಪ್ರಧಾನ ಕಾರ್ಯದರ್ಶಿ ಜಯಮ್ಮ, ಪ್ರಮುಖರಾದ ಶಿವಾನಂದ ವಂಕಲಕುಂಟ, ವಾಗೀಶ್ ಹಿರೇಮಠ, ಅಶ್ವಿನಿ ಟಿ. ದೇಸಾಯಿ, ಯಮನೂಕು ಇದ್ಲೂಪೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ