ಅ.6 ರಂದು ಸಿಎಂ ಕೊಪ್ಪಳ ಪ್ರವಾಸ: ಕಾನೂನು ಸುವ್ಯವಸ್ಥೆ ಕುರಿತು ಪೂರ್ವಭಾವಿ ಸಭೆ
ಕೊಪ್ಪಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.6 ರಂದು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಜನಸ್ತೋಮ ನಿರೀಕ್ಷೆಯಿದ್ದು, ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ನಿರ್ವಹಣೆಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಪೊಲೀಸ್ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ ತಿಳಿಸಿದ್ದಾರೆ.
ಮಂಗಳವಾರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಸೂಚಿಸಿದರು.
ನಮ್ಮ ಜಿಲ್ಲಾ ಪೊಲೀಸರು ಸೇರಿದಂತೆ ಬೇರೆ ಜಿಲ್ಲೆಗಳಿಂದ 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಅವರಿಗೆ ಸಮುದಾಯ ಭವನಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ವಾಹನಗಳ ಪಾಸ್ ಪಡೆಯಲು ಗುರುತಿನ ಚೀಟಿಯೊಂದಿಗೆ ಫೋಟೋ ಸಲ್ಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಿಂದ ಮುಖ್ಯ ವೇದಿಕೆವರೆಗಿನ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು ಎಂದು ಎಚ್ಚರಿಕೆ ನೀಡಲಾಯಿತು.
ಜೆಸ್ಕಾಂ, ನಗರಸಭೆ, ಪೊಲೀಸ್ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿಭಾಯಿಸಬೇಕೆಂದು ಸೂಚಿಸಲಾಯಿತು.
ಸಭೆಯಲ್ಲಿ ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ಜಿಲ್ಲಾ ವಾರ್ತಾಧಿಕಾರಿ ಡಾ.ಸುರೇಶ ಜಿ., ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಜುಮ್ಮನ್ನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.