ಕೊಪ್ಪಳ ಜಿಲ್ಲೆ ಬರ ಘೋಷಣೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ : ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆ ನಾಶವಾಗಿರುವ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಚಿವ ಶಿವರಾಜ್ ಎಸ್. ತಂಗಡಗಿ, ನಷ್ಟಕ್ಕೊಳಗಾದ ರೈತರಿಗೆ ನ್ಯಾಯಯುತ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಹಿರಿಯ ಸಂಪುಟ ಸಹೋದ್ಯೋಗಿ ಬಸವರಾಜ ರಾಯರೆಡ್ಡಿ ಅವರೊಂದಿಗೆ ಕುಷ್ಟಗಿ, ಕುಕನೂರ, ಯಲಬುರ್ಗಾ ಹಾಗೂ ಕೊಪ್ಪಳ ತಾಲೂಕುಗಳ ಬೆಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಶೇ.40ರಷ್ಟು ಮಳೆ ಕೊರತೆಯಾಗಿದ್ದು, ಇದರಿಂದ ಶೇ.63ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದು ತಿಳಿಸಿದರು.
ತೊಗರಿ, ಹೆಸರು, ಸಜ್ಜೆ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿರುವುದನ್ನು ಖುದ್ದು ವೀಕ್ಷಿಸಿದ್ದು, ಈ ಕುರಿತು ಜಿಲ್ಲಾಡಳಿತದಿಂದ ಸಮಗ್ರ ವರದಿ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.
ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ವಾಸ್ತವ ಪರಿಸ್ಥಿತಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ರೈತರೊಂದಿಗೆ ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಭರವಸೆ ನೀಡಿದರು.
ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ರಾಜ್ಯದಲ್ಲಿ ವಾಡಿಕೆಯ ಮಳೆ ಶೇ.32ರಷ್ಟು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ ಶೇ.40ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ 100 ಎಕರೆ ಪ್ರದೇಶದಲ್ಲಿ ಬಿತ್ತನೆ ಆಗಬೇಕಾದರೆ ಈ ಬಾರಿ ಕೇವಲ 66 ಎಕರೆ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಮಾತನಾಡಿ, ಬಾಡುತ್ತಿರುವ ಬೆಳೆಗಳ ಕುರಿತು ಕ್ಷೇತ್ರಮಟ್ಟದಲ್ಲಿ ಫೋಟೊ ಹಾಗೂ ವಿಡಿಯೊ ಸಂಗ್ರಹಿಸಿ ವಸ್ತುನಿಷ್ಠ ವರದಿ ಸರ್ಕಾರಕ್ಕೆ ಕಳುಹಿಸಲಾಗುವುದು. ಈಗಾಗಲೇ ಜಿಲ್ಲೆಯ 1.56 ಲಕ್ಷ ರೈತರು ಬೆಳೆ ವಿಮೆ ಪ್ರೀಮಿಯಂ ಪಾವತಿಸಿದ್ದು, ಬರ ಪರಿಸ್ಥಿತಿಯಲ್ಲಿ ಪರ್ಯಾಯ ಕೃಷಿಯತ್ತ ರೈತರನ್ನು ಪ್ರೇರೇಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳ ಮಾಹಿತಿ ಪ್ರಕಾರ, ಕೊಪ್ಪಳ ಜಿಲ್ಲೆಯಲ್ಲಿ ಇದುವರೆಗೆ 158 ಮಿಮೀ ವಾಡಿಕೆ ಮಳೆಯಾಗಬೇಕಿದ್ದರೆ ಕೇವಲ 98 ಮಿಮೀ ಮಳೆಯಾಗಿದೆ. ಯಲಬುರ್ಗಾ ತಾಲೂಕಿನಲ್ಲಿ ಶೇ.35 ಹಾಗೂ ಕುಕನೂರ ತಾಲೂಕಿನಲ್ಲಿ ಶೇ.24ರಷ್ಟು ಮಳೆ ಕೊರತೆ ದಾಖಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಸಂಗಣ್ಣ ಕರಡಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ ಪಿ ಮೋಹನರಾಜ್, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಕೊಪ್ಪಳ ಸಹಾಯಕ ಆಯುಕ್ತರಾದ ಮೆಹಬೂಬ ಜಿಲಾನಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.