ಗಂಗಾವತಿ: ನಗರದ ಸಮೀಪದ ವಿರುಪಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳ ಪಾಲಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ 50ಕ್ಕೂ ಹೆಚ್ಚು ಪಾಲಕರು ಭಾಗವಹಿಸಿದ್ದರು. ಅವರಿಗೆ ನೇತ್ರ ತಪಾಸಣೆ, ಮೊಣಕಾಲು ನೋವು, ಮಧುಮೇಹ, ರಕ್ತದೊತ್ತಡ ಹಾಗೂ ಹೃದಯ ಸಂಬಂಧಿತ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಸಲಾಯಿತು. ತಪಾಸಣೆಯ ವೇಳೆ ಎಂಟು ಜನ ಪಾಲಕರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು. ಉಳಿದ ಪಾಲಕರಿಗೆ ಅಗತ್ಯವಾದ ಆಯುರ್ವೇದ ಔಷಧಿಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ 62 ವಿದ್ಯಾರ್ಥಿಗಳಿಗೆ ಚ್ಯವನಪ್ರಾಶ್ ಹಾಗೂ ವಿಟಮಿನ್‌ಗಳನ್ನು ವಿತರಿಸಲಾಯಿತು.

ಸರ್ಕಾರಿ ಆಸ್ಪತ್ರೆಯ ಆಯುರ್ವೇದ ವೈದ್ಯ ಗುರುರಾಜ್ ಉಮಚಗಿ ಮಾತನಾಡಿ, ಆಯುರ್ವೇದ ಔಷಧ ಪದ್ಧತಿಯು ಪ್ರಾಚೀನ ಹಾಗೂ ಶ್ರೇಷ್ಠ ಚಿಕಿತ್ಸಾ ಪದ್ಧತಿಯಾಗಿದ್ದು, ವೈದ್ಯರ ಸಲಹೆಯಂತೆ ಔಷಧಿಗಳನ್ನು ಬಳಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಶರಣಪ್ಪ ಹಕ್ಕಂಡಿ ಮಾತನಾಡಿ, ಸರ್ಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಶಾಲೆಯ ಪಾಲಕರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ತಪಾಸಣಾ ಶಿಬಿರ ನಡೆಸಿರುವುದು ಸಂತಸದ ಸಂಗತಿಯಾಗಿದೆ. ಪಾಲಕರು ಇಂತಹ ಆರೋಗ್ಯ ಸೇವೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೈದ್ಯೆ ವೀಣಾ ವೆಂಕಟೇಶ, ಆಸ್ಪತ್ರೆಯ ಸಿಬ್ಬಂದಿ ಖಾಜಾಹುಸೇನ್ ಹಾಗೂ ಇತರ ಸಿಬ್ಬಂದಿ, ಶಾಲೆಯ ಶಿಕ್ಷಕಿಯರಾದ ರೇಣುಕಾ ಜಿ. ಮತ್ತು ಆಶಾರಾಣಿ ಎನ್. ಸೇರಿದಂತೆ ಹಲವರು ಉಪಸ್ಥಿತರಿದ್ದು, ಶಿಬಿರದ ಯಶಸ್ಸಿಗೆ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ