ಗವಿಸಿದ್ದೇಶ್ವರ ಸ್ವಾಮೀಜಿ, ಶಿವರಾಜ್ ತಂಗಡಗಿ 

ಬೆಂಗಳೂರು: ಮೈಸೂರು ದಸರಾವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳೇ ಉದ್ಘಾಟಿಸುವುದು ನಿಶ್ಚಿತವಾಗಿದ್ದು, ಈ ಕುರಿತು ಯಾವುದೇ ಗೊಂದಲ ಅಥವಾ ಅನುಮಾನಕ್ಕೆ ಅವಕಾಶವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟನೆ ಹೊರಡಿಸಿರುವ ಸಚಿವರು, ಗವಿಸಿದ್ದೇಶ್ವರ ಶ್ರೀಗಳು ದಸರಾ ಉದ್ಘಾಟನೆಗೆ ಒಪ್ಪಿಲ್ಲ, ಸರ್ಕಾರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅದು ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತ ಮಾಹಿತಿ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಬಳಿಕವೇ, ಈ ಬಾರಿಯ ಮೈಸೂರು ದಸರಾವನ್ನು ಗವಿಸಿದ್ದೇಶ್ವರ ಶ್ರೀಗಳು ಉದ್ಘಾಟಿಸಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿಗಳೇ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ಘೋಷಣೆಯ ನಂತರವೂ ಶ್ರೀಗಳು ಆಹ್ವಾನ ತಿರಸ್ಕರಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಕೆಲವರು ಉದ್ದೇಶಪೂರ್ವಕವಾಗಿ ಹರಡುತ್ತಿದ್ದು, ಇದು ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರವು ಈಗಾಗಲೇ ಗವಿಮಠದೊಂದಿಗೆ ಸಂಪರ್ಕ ಸಾಧಿಸಿದ್ದು, ಸೆ.28ರಂದು ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳನ್ನು ಅಧಿಕೃತವಾಗಿ ಆಹ್ವಾನಿಸುವ ಕಾರ್ಯಕ್ರಮ ನಿಗದಿಯಾಗಿದೆ. ಹೀಗಾಗಿ, ಶ್ರೀಗಳ ಒಪ್ಪಿಗೆ ಇಲ್ಲ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಕುರಿತು ಸುಳ್ಳು ಹಾಗೂ ಆಧಾರರಹಿತ ಮಾಹಿತಿ ಹರಡಿ ಜನರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಸಚಿವರು, ದಸರಾ ಉದ್ಘಾಟನೆ ಸೇರಿದಂತೆ ಯಾವುದೇ ಅಧಿಕೃತ ಮಾಹಿತಿಗಾಗಿ ಸರ್ಕಾರದ ಅಧಿಕೃತ ಪ್ರಕಟಣೆಗಳನ್ನೇ ಪರಿಗಣಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor