ಕನಕಗಿರಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಮಂಜುನಾಥ ಶಿವಲಿಂಗಪ್ಪ ಅವರು ಶನಿವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದರು.

ಆಸ್ಪತ್ರೆಯ ಶೌಚಾಲಯಗಳ ಸ್ವಚ್ಛತೆ, ಔಷಧಗಳ ಲಭ್ಯತೆ ಮತ್ತು ದಾಸ್ತಾನು, ರೋಗಿಗಳಿಗೆ ಕಲ್ಪಿಸಿರುವ ಬೆಡ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿಯನ್ನೂ ಪರಿಶೀಲಿಸಿದರು.

ಪರಿಶೀಲನೆ ವೇಳೆ ಆಸ್ಪತ್ರೆಯಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಹುದ್ದೆ ಖಾಲಿಯಿದ್ದು, ಅರೆವಳಿಕೆ ತಜ್ಞರು ನಿಯೋಜನೆಯ ಮೇಲೆ ತೆರಳಿರುವುದಾಗಿ ಸಿಬ್ಬಂದಿ ನ್ಯಾಯಾಧೀಶರ ಗಮನಕ್ಕೆ ತಂದರು. ಶಸ್ತ್ರಚಿಕಿತ್ಸೆ ನಡೆಸುವ ವ್ಯವಸ್ಥೆ ಇಲ್ಲದಿರುವ ಕುರಿತು ಕೂಡ ಮಾಹಿತಿ ನೀಡಲಾಯಿತು.

ಸ್ಥಳೀಯರು ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯರ ಕೊರತೆ ಇಲ್ಲ ಹಾಗೂ ಚಿಕಿತ್ಸೆ ಸಮರ್ಪಕವಾಗಿ ದೊರೆಯುತ್ತಿದೆ. ಆದರೆ ಹೆರಿಗೆ ಮತ್ತು ಪ್ರಸೂತಿ ತಜ್ಞರ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಪರಿಶೀಲನೆ ವೇಳೆ ವೈದ್ಯ ಡಾ. ಶರಣಪ್ಪ ಸಿಂಗನಾಳ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor