Kanakagiri | ಸ್ವಾತಂತ್ರ್ಯ ದಿನಾಚರಣೆಯಂದು ಪ್ಲ್ಯಾಸ್ಟಿಕ್ ಧ್ವಜ ನಿಷೇಧಕ್ಕೆ ಸೂಚನೆ
ಕನಕಗಿರಿ : ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲು ತಾಲ್ಲೂಕು ಆಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಈ ಬಾರಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಹಾಗೂ ಬಳಕೆಗೆ ಅವಕಾಶ ನೀಡಬಾರದು ಎಂದು ತಹಶೀಲ್ದಾರ್ ಚಂದ್ರಶೇಖರ ಗಾಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಪಿಎಸ್ ಶಾಲಾ ಆವರಣದಲ್ಲಿ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಮಕ್ಕಳಿಂದ ಪಥಸಂಚಲನ, ದೇಶಭಕ್ತಿ ಗೀತೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿವೆ ಎಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ದೇಶಭಕ್ತಿ ಗೀತೆಗಳನ್ನಷ್ಟೇ ಬಳಸಬೇಕು. ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ಅಲಂಕಾರ ಕಡ್ಡಾಯವಾಗಿ ಮಾಡಬೇಕು. ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಪ್ರಭಾರ ಇಒ ರಾಜಶೇಖರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಾದ ಬೈಲಪ್ಪ, ಶ್ರೀರಾಮ ನಾಯಕ, ಶ್ರೀಕಾಂತ್, ಗೌಸುಪಾಷ, ರಾಜೀವ್ ಎಂ.ಆರ್. ಹಾಗೂ ಇತರರು ಉಪಸ್ಥಿತರಿದ್ದರು.