ಕನಕಗಿರಿ: ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ರವಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ, ಅಷ್ಟರಲ್ಲಾಗಲೇ ಕ್ರೀಡಾ ಇಲಾಖೆಗೆ ಸೇರಿದ ಸುಮಾರು 30 ಬಂಡಲ್ ಕಬಡ್ಡಿ ಮ್ಯಾಟ್‌ಗಳು ಹಾಗೂ 2,500 ಲೀಟರ್ ಸಾಮರ್ಥ್ಯದ ನೀರಿನ ಸಿಂಟೆಕ್ಸ್ ಟ್ಯಾಂಕ್ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿವೆ. ಹಾನಿಗೊಳಗಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ಎರಡು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಶಾಲಾ ಆವರಣದಲ್ಲಿ ಈ ಹಿಂದೆಯೂ ಸಿಸಿಟಿವಿ ಕ್ಯಾಮೆರಾಗಳು, ನೀರಿನ ಪೈಪ್‌ಗಳು ಹಾಗೂ ಶೌಚಾಲಯದ ಬಾಗಿಲುಗಳನ್ನು ಹಾನಿಗೊಳಿಸಿದ ಘಟನೆಗಳು ನಡೆದಿವೆ ಎಂದು ತಿಳಿದುಬಂದಿದೆ.

ಪ್ರಸ್ತುತ ಅಗ್ನಿ ಅವಘಡಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿವಾಸ ಎಂ. ಸಕ್ರಿ ಅವರು ಕನಕಗಿರಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor