Kanakagiri | ಚಿರತೆ ದಾಳಿಗೆ ಎರಡು ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ
ಕನಕಗಿರಿ : ತಾಲೂಕಿನ ಕರಡೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ. ಮಲ್ಲಾಪುರ ಗ್ರಾಮದಲ್ಲಿ ಚಿರತೆಯೊಂದು ದಾಳಿ ನಡೆಸಿ ಎರಡು ಕುರಿಗಳನ್ನು ಕೊಂದ ಘಟನೆ ಶುಕ್ರವಾರ ನಡೆದಿದೆ.
ಗುರುವಾರ ರಾತ್ರಿ ಜಮೀನಿನಲ್ಲಿ ಕಟ್ಟಿದ್ದ ರೈತ ರಾಮೇಶ ಚಾಟೆರ್ ಅವರ ಕುರಿಗಳ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆಯ ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಗ್ರಾಮಸ್ಥರು ರಾತ್ರಿ ವೇಳೆ ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆಯನ್ನು ಶೀಘ್ರದಲ್ಲೇ ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದರು.
ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಹಾಗೂ ಜಾನುವಾರುಗಳ ಸುರಕ್ಷತೆಗಾಗಿ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.