Koppal | ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಕಾಂಗ್ರೆಸ್‌ನಿಂದ ಕುತಂತ್ರ ಆರೋಪಿಸಿ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್‌ ಕಚೇರಿಗೆ ಕಲ್ಲು ತೂರಾಟ ಆರೋಪ; ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Update: 2026-07-23 17:36 IST

ಕೊಪ್ಪಳ: ನೀಟ್ (NEET) ಪರೀಕ್ಷೆ ವಿಚಾರದಲ್ಲಿ ಯುವಕರನ್ನು ದಾರಿ ತಪ್ಪಿಸಿ ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಬದಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ಪ್ರತಿಭಟನೆಯಲ್ಲಿ ಭಾಗವಹಿಸಿರುವುದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾವಚಿತ್ರ ದಹಿಸಿದರು. ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಈ ವೇಳೆ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಸೇರಿದಂತೆ ಬಿಜೆಪಿ ಮುಖಂಡರು ಕಾಂಗ್ರೆಸ್ ಕಚೇರಿ ಮುಂಭಾಗಕ್ಕೆ ತೆರಳಿದರು. ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಕೆಲವರು ಇಟ್ಟಿಗೆಗಳನ್ನು ಎಸೆದ ಪರಿಣಾಮ ಕಚೇರಿಯ ಗಾಜುಗಳಿಗೆ ಹಾನಿಯಾಗಿದೆ ಎಂದು ಆರೋಪಿಸಲಾಗಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಮಧ್ಯಪ್ರವೇಶಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ಕಾಂಗ್ರೆಸ್‌ನಿಂದ ದೂರು :

ಘಟನೆಯ ಬಳಿಕ ಕಾಂಗ್ರೆಸ್ ಮುಖಂಡರು ನಗರ ಪೊಲೀಸ್ ಠಾಣೆಗೆ ತೆರಳಿ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಅವರಿಗೆ ದೂರು ಸಲ್ಲಿಸಿದರು.

ಬಿಜೆಪಿ ಮುಖಂಡರು ಕಾಂಗ್ರೆಸ್ ಕಚೇರಿಗೆ ಅನಧಿಕೃತವಾಗಿ ಪ್ರವೇಶಿಸಿ ಧ್ವಂಸ ನಡೆಸಿದ್ದು, ಕಚೇರಿ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News