ಕೊಪ್ಪಳ | ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ
ಕೊಪ್ಪಳ : ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯುವಂತೆ ಆಗ್ರಹಿಸಿ ಮತ್ತು ಕಟ್ಟಡ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಆಡಳಿತ ಭವನದ ಮುಂದೆ ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ರವಿ ಕುಮಾರ್ ವಸ್ತ್ರದ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮನವಿಯಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ನಾಲ್ಕು ಕಾರ್ಮಿಕ ಸಂಹಿತೆಯನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ರಾಜ್ಯ ಸರಕಾರ ಆಗ್ರಹಿಸಬೇಕು ಎಂದು ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ಕಟ್ಟಡ ಕಾರ್ಮಿಕರಿಗೆ ನಿವೃತ್ತಿ ವೇತನ ಬಂದಿಲ್ಲ. ಕಟ್ಟಡ ಕಾರ್ಮಿಕರ ಮಂಡಳಿಯಿಂದ ಗುರುತಿಸಿರುವ ಕೊಪ್ಪಳದ ಕೆ.ಎಸ್. ಆಸ್ಪತ್ರೆಯಲ್ಲಿ ಅಪಘಾತವಾದ ಕಟ್ಟಡ ಕಾರ್ಮಿಕರಿಗೆ ಚಿಕಿತ್ಸೆಗೆ ಹೋದಾಗ ಮೊದಲು ಠೇವಣಿ ಇಡಲು ಹೇಳುತ್ತಾರೆ. ಮೊದಲು ಒಳ ರೋಗಿಯಾಗಿ ಸೇರಿಸಿಕೊಂಡು ಚಿಕಿತ್ಸೆ ನೀಡಿ ಮಂಡಳಿಯಿಂದ ಹಣ ಪಡೆಯುವಂತೆ ಸುತ್ತೋಲೆ ಹೊರಡಿಸಬೇಕು. ಜಿಲ್ಲೆಯಲ್ಲಿ ವ್ಯಾಪಕವಾಗಿರುವ ನಕಲಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಗಳನ್ನು ತಕ್ಷಣ ರದ್ದುಪಡಿಸಿ ನೈಜ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.
ಈ ವೇಳೆ ಜಿಲ್ಲಾ ಘಟಕದ ಪ್ರಧಾನ ಸಂಚಾಲಕ ಬಸವರಾಜ್ ಶೀಲವಂತರ್, ಸಂಚಾಲಕ ಎಸ್.ಎ.ಗಫಾರ್, ಪಾನಿಷಾ ಮಕಾಂದಾರ್, ಸಂಶುದ್ದೀನ್ ಮಕಾಂದಾರ್, ಗಾಳೆಪ್ಪ ಪೂಜಾರ ಲೆಬಗೇರಿ, ಮಖಬೂಲ್ ರಾಯಚೂರು, ಶಿವಪ್ಪ ಹಡಪದ್, ರಿಯಾಝ್ ಮಕಾಂದಾರ್, ಆದಿತ್ಯ ಟಿ, ಪಾತ್ರೋಟಿ, ಪ್ರಕಾಶ್ ದೇವರ ಮನಿ ಮುಂತಾದವರು ಉಪಸ್ಥಿತರಿದ್ದರು.