ಕೊಪ್ಪಳ | ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಅಗತ್ಯ: ಎನ್.ಎಚ್.ಕೋನರಡ್ಡಿ
ಕೊಪ್ಪಳ : ಸರ್ಕಾರದ ಎಲ್ಲಾ ಯೋಜನೆಗಳನ್ನು ಜಿಲ್ಲಾ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತ್ಯಗತ್ಯ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ನವಲಗುಂದ ಶಾಸಕರಾದ ಎನ್.ಎಚ್.ಕೋನರಡ್ಡಿ ತಿಳಿಸಿದ್ದಾರೆ.
ಗುರುವಾರ ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ವಿವಿಧ ಜಿಲ್ಲೆಗಳ ಸಮಸ್ಯೆಗಳನ್ನು ನೇರವಾಗಿ ತಿಳಿದುಕೊಳ್ಳುವುದು ನಮ್ಮ ಉದ್ದೇಶ. ಸರ್ಕಾರದ ಯೋಜನೆಗಳು ಸರಿಯಾಗಿ ಜಾರಿಯಾಗದಿದ್ದರೆ ಅದರ ಪ್ರಯೋಜನ ಜನತೆಗೆ ಸಿಗದು ಎಂದು ಹೇಳಿದರು.
ಅಧಿಕಾರಿಗಳು ಮಿಷನ್ ಇಂದ್ರಧನುಷ್, ಮಾತೃ ವಾತ್ಸಲ್ಯ, ಮಕ್ಕಳ ರಕ್ಷಣಾ ಘಟಕ, ಬಾಲ ನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ದೇವದಾಸಿ ಮಕ್ಕಳಿಗೆ ನೆರವಿನಂತಹ ಯೋಜನೆಗಳನ್ನು ಸರಿಯಾಗಿ ಅರಿತು ಪರಿಣಾಮಕಾರಿ ರೀತಿಯಲ್ಲಿ ಜಾರಿಗೆ ತರಬೇಕೆಂದರು.
ಯಾದಗಿರಿ ಜಿಲ್ಲೆಯಲ್ಲಿ ಬಾಲ್ಯವಿವಾಹದ ಪರಿಣಾಮವಾಗಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ರಾಷ್ಟ್ರವ್ಯಾಪಿ ಸುದ್ದಿಯಾಯಿತು. ಇಂತಹ ಘಟನೆಗಳು ಮರುಕಳಿಸದಂತೆ ಬಾಲ್ಯವಿವಾಹ ಹಾಗೂ ಪೋಕ್ಸೊ ಪ್ರಕರಣಗಳ ಮೇಲೆ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಎಚ್ಚರಿಸಿದರು.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದೊಂದಿಗೆ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಸಿ.ಎಸ್.ಆರ್. ಅನುದಾನದಡಿ ಗಣಿತ, ವಿಜ್ಞಾನ ಹಾಗೂ ಇಂಗ್ಲೀಷ್ ಶಿಕ್ಷಕರನ್ನು ನೇಮಿಸುವ ಅವಕಾಶವನ್ನು ಬಳಸಿಕೊಂಡು ಎಸೆಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಪ್ರಯತ್ನಿಸಬೇಕು ಎಂದರು.
ಬಾಲ್ಯವಿವಾಹ ತಡೆಗೆ ಎಲ್ಲಾ ಶಾಲಾ ಮತ್ತು ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು ಪ್ರತಿ ತಿಂಗಳ ವರದಿ ಸಲ್ಲಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಸಭಾ ಸದಸ್ಯ ಹಾಗೂ ಸಮಿತಿಯ ಸದಸ್ಯ ಹೆಚ್.ಎ.ಇಕ್ಬಾಲ್ ಹುಸೇನ್ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಕಿಡ್ನಾಪ್, ರೇಪ್, ಮಿಸ್ಸಿಂಗ್ ಹಾಗೂ ಪೋಕ್ಸೊ ಪ್ರಕರಣಗಳ ಪ್ರಮಾಣ ಹೆಚ್ಚಾಗಿದೆ. ಇವುಗಳ ನಿಯಂತ್ರಣಕ್ಕೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು. ಖಾಸಗಿ ದತ್ತು ಮಕ್ಕಳ ಕೇಂದ್ರಗಳು ದುಡ್ಡು ಮಾಡುವ ಕೇಂದ್ರಗಳಾಗಬಾರದು ಎಂದು ಹೇಳಿದರು.
ಅನ್ನಭಾಗ್ಯ ಯೋಜನೆ ಬಡಜನರಿಗೆ ಆಶೀರ್ವಾದವಾಗಿದೆ ಎಂದು ಹೇಳಿ, ಅಂತ್ಯೋದಯ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು. ಅರ್ಹ ಮಹಿಳಾ ಕಾರ್ಮಿಕರಿಗೆ ಲೇಬರ್ ಕಾರ್ಡ್ ಮಾಡಿಸಿ, ಸರ್ಕಾರದ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಸದಸ್ಯ ಶರಣಗೌಡ ಕಂದಕೂರ ಮಾತನಾಡಿ, ಬಾಲ್ಯವಿವಾಹ ಮತ್ತು ಮಕ್ಕಳ ಮಿಸ್ಸಿಂಗ್ ಪ್ರಕರಣಗಳನ್ನು ತಡೆಯಲು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸದಸ್ಯೆ ಕರೆಮ್ಮ ನಾಯ್ಕ ಮಾತನಾಡಿದರು.
ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಮಾತನಾಡಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಕಾವಲು ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಇದೇ ರೀತಿಯ ಸಮಿತಿಗಳನ್ನು ರಚಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಅಧ್ಯಕ್ಷ ಎನ್.ಎಚ್. ಕೋನರಡ್ಡಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಮಕ್ಕಳ ಕಾವಲು ಸಮಿತಿಗಳ ರಚನೆಗೆ ರಾಜ್ಯಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಜಿಲ್ಲಾಡಳಿತದ ಪರವಾಗಿ ಇದೇ ವೇಳೆ ಸನ್ಮಾನಿಸಲಾಯಿತು.
ಸಭೆಯಲ್ಲಿ ಪೋಲಿಸ್ ಮಹಾನಿರೀಕ್ಷಕರಾದ ಸತೀಶ್ ಕುಮಾರ್, ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕರಾದ ವರ್ತಿಕ ಕಟಿಯಾರ್, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ಧಿ, ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತರಾದ ಪಾಂಡ್ವೆ ರಾಹುಲ್ ತುಕಾರಾಮ್ ಹಾಗೂ ವಿಧಾನಸಭೆಯ ಅಧಿಕಾರಿಗಳು ಮತ್ತು ಕೊಪ್ಪಳ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳು, ಕೊಪ್ಪಳ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.