ಯಲಬುರ್ಗಾ: ಪಟ್ಟಣದ ಕುದ್ರಿಕೋಟಗಿ ರಸ್ತೆಯ ಆಶ್ರಯ ಕಾಲೋನಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಘಟನೆ ಸೋಮವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ವಸತಿ ನಿಲಯದಲ್ಲಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

 ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಅಡುಗೆ ಕೋಣೆಯಲ್ಲಿದ್ದ ಕೆಲ ವಸ್ತುಗಳು ಸುಟ್ಟುಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಸತಿ ನಿಲಯದಲ್ಲಿ ಗ್ಯಾಸ್ ಸೋರಿಕೆ ಕಂಡುಬಂದಿದ್ದರೂ ತಕ್ಷಣ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ. ವಸತಿ ನಿಲಯಗಳ ನಿರ್ವಹಣೆಗೆ ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂಪಾಯಿ ಅನುದಾನ ನೀಡುತ್ತಿದ್ದರೂ, ಸುರಕ್ಷತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ನಡೆಯುತ್ತಿಲ್ಲ ಎಂದು ಅವರು ದೂರಿದ್ದಾರೆ.

ವಸತಿ ನಿಲಯದ ನಿಲಯ ಪಾಲಕ ಕರಿಯಪ್ಪ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಅಲ್ಲದೆ, ಯಲಬುರ್ಗಾ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಮುಖಂಡ ಗಂಗರಾಜ್ ಅಳ್ಳೊಳ್ಳಿ ಒತ್ತಾಯಿಸಿದ್ದಾರೆ.

“ಅಡುಗೆ ಮಾಡುತ್ತಿದ್ದ ವೇಳೆ ರೆಗ್ಯುಲೇಟರ್ ಮೂಲಕ ಗ್ಯಾಸ್ ಸೋರಿಕೆಯಾಗುತ್ತಿರುವುದು ಅಡುಗೆ ಸಿಬ್ಬಂದಿಯ ಗಮನಕ್ಕೆ ಬಂದಿದೆ. ತಕ್ಷಣ ಈ ಕುರಿತು ನಿಲಯ ಪಾಲಕರಿಗೆ ಮಾಹಿತಿ ನೀಡಲಾಗಿತ್ತು. ರೆಗ್ಯುಲೇಟರ್ ದೋಷಪೂರಿತವಾಗಿರುವುದು ತಿಳಿದು, ಹೊಸ ರೆಗ್ಯುಲೇಟರ್ ತಂದು ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಸಿಲಿಂಡರ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.”

-ಶಶಿಧರ್ ಸಕ್ರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಯಲಬುರ್ಗಾ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor