ಕೊಪ್ಪಳ | ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಗ್ರಾ.ಪಂ ಅಧ್ಯಕ್ಷೆ ಫರೀದಾ ಬೇಗಂ ಆಯ್ಕೆ: ಗ್ರಾಮಸ್ಥರ ಹರ್ಷ
ಕೊಪ್ಪಳ/ ಕುಕನೂರು: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆ.15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲ್ಲೂಕಿನ ಕುದರಿಮೋತಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್ ಅವರು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ವಿವಿಧ ಮಾನದಂಡಗಳನ್ನು ಆಧರಿಸಿ ರಾಜ್ಯದಲ್ಲಿ ಕೊಡಗು, ದಕ್ಷಣ ಕನ್ನಡ, ಚಿಕ್ಕಮಗಳೂರು, ತುಮಕೂರು, ಬೆಳಗಾವಿ, ಕಲಬುರಗಿ ಹಾಗೂ ಕೊಪ್ಪಳ ಜಿಲ್ಲೆಯ ಕೇವಲ ಎಂಟು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಮಾತ್ರ ವಿಶೇಷ ಅತಿಥಿಯನ್ನಾಗಿ ಆಯ್ಕೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕದಲ್ಲಿ ಕೇವಲ ಇಬ್ಬರು ಆಯ್ಕೆಯಾಗಿದ್ದು, ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಆಯುಕ್ತಾಲಯ ಅಧಿಕೃತ ಮಾಹಿತಿ ನೀಡಿದೆ.
ಈ ಎಂಟು ಜನರಿಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆಯ್ಕೆಯಾದ ಸದಸ್ಯರು ತಮ್ಮೊಂದಿಗೆ ಪತಿ ಅಥವಾ ಪತ್ನಿಯನ್ನು ಕರೆದೊಯ್ಯಲು ಅವಕಾಶವಿದ್ದು, ರೈಲು ಪ್ರಯಾಣ ಹಾಗೂ ದೆಹಲಿಯ ಕರ್ನಾಟಕ ಭವನದಲ್ಲಿ ಉಳಿದುಕೊಳ್ಳುವ ವಸತಿ, ಊಟ, ಉಪಹಾರದ ವೆಚ್ಚವನ್ನು ಪಂಚಾಯತ್ ನಿಧಿಯಿಂದ ಭರಿಸುವಂತೆ ಸೂಚಿಸಲಾಗಿದೆ.
ಗ್ರಾಮಸ್ಥರ ಹರ್ಷ :
ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆ.15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ತಾಲ್ಲೂಕಿನ ಕುದರಿಮೋತಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಫರೀದಾಬೇಗಂ ಹುಸೇನಸಾಬ್ ತಂಬಾಕದಾರ್ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.