Koppal | ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ಖಂಡಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
ಕಲ್ಯಾಣ ಯೋಜನೆಗಳ ಹಣ ಬಿಡುಗಡೆ, ಪಿಂಚಣಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ಕೊಪ್ಪಳ : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯ ದುರ್ಬಳಕೆಯನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ (ಎಐಯುಟಿಯುಸಿ) ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಜಿಲ್ಲಾ ಆಸ್ಪತ್ರೆ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಮಿಕರು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎ. ದೇವದಾಸ್, ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾದ ನಿಧಿಯನ್ನು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ಬಳಸುತ್ತಿರುವುದು ಖಂಡನೀಯ. ಕಲ್ಯಾಣ ಮಂಡಳಿಯ ನಿಧಿಯನ್ನು ಸಾಮಾಜಿಕ ಭದ್ರತೆ, ಆರೋಗ್ಯ, ಶಿಕ್ಷಣ ಹಾಗೂ ನಿವೃತ್ತಿ ಜೀವನದ ರಕ್ಷಣೆಗಾಗಿ ಮಾತ್ರ ಬಳಸಬೇಕು ಎಂದು ಒತ್ತಾಯಿಸಿದರು.
ಮೇಸನ್ ಕಿಟ್, ಸೇಫ್ಟಿ ಕಿಟ್ ಹಾಗೂ ಶೈಕ್ಷಣಿಕ ಕಿಟ್‌ಗಳ ಹೆಸರಿನಲ್ಲಿ ವಸ್ತು ವಿತರಿಸುವ ಬದಲು ಆ ಮೊತ್ತವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕು. 2021ರ ಆದೇಶದಂತೆ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಧನಸಹಾಯ ಯೋಜನೆಯನ್ನು ಮರುಜಾರಿಗೊಳಿಸಬೇಕು. ನೋಂದಾಯಿತ ಕಾರ್ಮಿಕರು ಮತ್ತು ಅವರ ಕುಟುಂಬಗಳಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ಕಾರ್ಮಿಕರಿಗೆ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಗಡ್ಡಿ ಮಾತನಾಡಿ, ಮಂಜೂರಾಗಿರುವ ವಿವಿಧ ಯೋಜನೆಗಳ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಬಾಕಿ ಉಳಿದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಸರ್ಕಾರದ ಎಲ್ಲ ಕಲ್ಯಾಣ ಯೋಜನೆಗಳು ಅರ್ಹ ಕಾರ್ಮಿಕರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ತಾಲೂಕು ಕಾರ್ಮಿಕ ಅಧಿಕಾರಿ ಮಂಜುಳಾ ಅವರ ಮೂಲಕ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಸುರೇಶ ದಳಪತಿ, ಕುಮಾರ್ ಡಿ., ನಾಗರಾಜ್ ಹುಲಗಿ, ಶಬ್ಬೀರ್ ಕುಲುಮಿ, ಚಂದ್ರಶೇಖರ, ಮೊದಿನ್, ಯಲ್ಲನಗೌಡ, ಯಮನೂರ, ಮುರ್ತೆಪ್ಪ, ಬಾಬು, ಶರಣಪ್ಪ, ಯಲ್ಲಪ್ಪ, ಶರೀಫ್, ಕಟ್ಟೆಪ್ಪ, ಅಂಬಣ್ಣ, ಮುಬೀನ್, ಶಂಕರ, ಗಂಗಮ್ಮ, ಹನುಮವ್ವ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ನೂರಾರು ಕಟ್ಟಡ ಕಾರ್ಮಿಕರು ಪಾಲ್ಗೊಂಡಿದ್ದರು.