Koppal | ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಕೊಪ್ಪಳ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಅಶೋಕ ವೃತ್ತದಲ್ಲಿ ಮುಖ್ಯ ಚುನಾವಣಾ ಆಯುಕ್ತ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಹೋರಾಟಗಾರರು, ಚುನಾವಣಾ ಆಯೋಗದೊಳಗಿನ ನಿರ್ಧಾರ ಪ್ರಕ್ರಿಯೆ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಆರೋಪಿಸಿದರು.
ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಮತದಾರರ ನೋಂದಣಿ, ಮತದಾರರ ಹೆಸರುಗಳನ್ನು ತೆಗೆದುಹಾಕುವುದು, ಮರು ಸೇರ್ಪಡೆ ಹಾಗೂ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಹಲವು ನಿರ್ಧಾರಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾಗಿದೆ ಎನ್ನಲಾದವರ ಹೆಸರುಗಳನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯೋಗದ ಸ್ವತಂತ್ರ ಹಾಗೂ ಪಾರದರ್ಶಕ ಕಾರ್ಯನಿರ್ವಹಣೆಯನ್ನು ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿ.ಐ.ಟಿ.ಯು ಜಿಲ್ಲಾ ಮುಖಂಡ ಖಾಸೀಮ್ ಸರ್ದಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ್ ಶೀಲವಂತರ್, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್, ಐ.ಎಫ್.ಟಿ.ಯು ಜಿಲ್ಲಾ ಸಂಚಾಲಕ ತುಕಾರಾಮ್ ಪಾತ್ರೋಟಿ, ಗಂಗಾವತಿ ತಾಲೂಕು ಸಂಚಾಲಕ ಚಾಂದ್ ಪಾಷಾ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಅಧ್ಯಕ್ಷ ಮುದುಕಪ್ಪ ಹೊಸಮನಿ, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಮಖಬೂಲ್ ರಾಯಚೂರು.ಸಿ.ಐ.ಟಿ.ಯು. ಕಾರ್ಮಿಕ ಮುಖಂಡರಾದ ಹನುಮೇಶ ಕಲ್ಮಂಗಿ, ಜಾಫರ್ ಕುರಿ, ಗಾಳೆಪ್ಪ ಮುಂಗೋಲಿ,ಸುಭಾನ್ ಸಾಬ್, ಷಣ್ಮುಖಪ್ಪ, ಮಿರಾಸಾಬ್ ಬನ್ನಿಗೊಳ ಹಾಗೂ ಆದಿತ್ಯ ಟಿ. ಪಾತ್ರೋಟಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.