Koppal | ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್ : ಒಂದೇ ಕುಟುಂಬದ 6 ಮಂದಿ ಮೃತ್ಯು
ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
ಕೊಪ್ಪಳ : ಸೇತುವೆ ಮೇಲಿಂದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಮೃತ ಪಟ್ಟ ಘಟನೆ ಮುನಿರಾಬಾದ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.
ಮೃತರನ್ನು ಕೆಂಚಪ್ಪ (35), ಮಹಾಂತೇಶ್ (18), ಭರತ್ (1), ಸವಿತಾ (12), ಮಾರೇಶ್ ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಯಶವಂತನಗರ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸುಮಾರು 16 ಮಂದಿ ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಟ್ಯಾಂಕರ್ ಲಾರಿಯೂ ಸಹ ಕೆಳಭಾಗಕ್ಕೆ ಉರುಳಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಿಸಿ ಹೊಸಪೇಟೆ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ.