×
Ad

ಕೊಪ್ಪಳ | ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ : ಡಿಸಿ ಸುರೇಶ ಇಟ್ನಾಳ

Update: 2025-12-18 18:04 IST

ಕೊಪ್ಪಳ.ಡಿ.18: ಜಿಲ್ಲೆಯಲ್ಲಿ ಡಿ.21 ರಿಂದ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ ಸಾರ್ವಜನಿಕರು ತಮ್ಮ ಹತ್ತಿರದ ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಅಥವಾ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋ ರೋಗವನ್ನು ತಡೆಗಟ್ಟಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,  ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಡಿ. 21 ರಿಂದ 24ರ ವರೆಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ. 21 ರಂದು ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುತ್ತದೆ. ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಡಿನೀಡಿ, ಲಸಿಕಾ ಕಾರ್ಯಕರ್ತರು ಪೋಲಿಯೋ ಲಸಿಕೆ ಹಾಕುತ್ತಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ  5 ವರ್ಷದೊಳಗಿನ ಮಕ್ಕಳ ಸಂಖ್ಯೆಯ ಗುರಿ ಒಟ್ಟು 1,76,580 ಆಗಿದ್ದು, ಲಸಿಕಾ ಕಾರ್ಯಕ್ರಮಕ್ಕಾಗಿ 877 ಬೂತ್‌ಗಳು, 19 ಮೊಬೈಲ್ ತಂಡಗಳು, 59 ಟ್ರಾನ್ಸಿಟ್ ತಂಡಗಳು ಹಾಗೂ 2,386 ಲಸಿಕಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದಲ್ಲದೇ ಪ್ರತಿ ತಾಲೂಕಿಗೆ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ವಿವಿಧ ವೃಂದದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕ್ಷೇತ್ರ ಭೇಟಿ ಮಾಡಲು ಮೇಲ್ವಿಚಾರಕರನ್ನಾಗಿ ನಿಯೋಜಿಸಲಾಗಿದೆ. ಒಟ್ಟಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ಧಾರೆ.

ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ನಮ್ಮ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ರೋಗವು ಇನ್ನೂ ಭೀತಿಯನ್ನುಂಟು ಮಾಡುತ್ತಿದ್ದು, ನಮ್ಮ ದೇಶದಲ್ಲೂ ಈ ರೋಗ ಮರುಕಳಿಸಬಹುದಾದ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಮಗುವಿಗೆ ಪ್ರತಿ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಿ, ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜೊತೆ ಕೈಜೋಡಿಸಿ, ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋವನ್ನು ಲಸಿಕೆ ಮೂಲಕ ಪ್ರತಿರೋಧಿಸೋಣ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದರೂ ಸಹ ಪುನಃ ಡಿ.21 ರಂದು ನಡೆಯುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತಪ್ಪದೇ ನಿಮ್ಮ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News