ಕೊಪ್ಪಳ | ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ : ಡಿಸಿ ಸುರೇಶ್ ಬಿ.ಇಟ್ನಾಳ
ಕೊಪ್ಪಳ: ಜಿಲ್ಲೆಯಲ್ಲಿ ನಡೆಯಲಿರುವ ಮುಖ್ಯಮಂತ್ರಿ ಅವರ ಪ್ರವಾಸದ ಅಂಗವಾಗಿ ಅ.6ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸುರೇಶ್ ಬಿ.ಇಟ್ನಾಳ ಸೂಚಿಸಿದರು.
ಶುಕ್ರವಾರ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಇಲಾಖೆಗಳ ಪ್ರಗತಿ ವರದಿಗಳನ್ನು ಸಮಿತಿಗೆ ತ್ವರಿತವಾಗಿ ಸಲ್ಲಿಸಲು ಸೂಚಿಸಿದರು. ಈ ಕಾರ್ಯಕ್ರಮದ ಅಂಗವಾಗಿ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಶಿಷ್ಟಾಚಾರ ಸಮಿತಿ, ಮೂಲಸೌಕರ್ಯ, ಆಹಾರ, ಆರೋಗ್ಯ, ಸಾರಿಗೆ ಸಮಿತಿಗಳು ರಚನೆಗೊಂಡಿದ್ದು, ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ಫಲಾನುಭವಿಗಳ ಪಟ್ಟಿಯನ್ನು ತಾಲ್ಲೂಕುವಾರು ಸಿದ್ಧಪಡಿಸಿ, ಸಾರಿಗೆ, ಪಾರ್ಕಿಂಗ್, ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಯಾವುದೇ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಗಾರರು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.