Kuknoor | ಚಿಕಿತ್ಸೆ ನೆಪದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಯತ್ನ ಆರೋಪ: ಆರ್‌ಎಂಪಿ ವೈದ್ಯನ ಬಂಧನ
ಪ್ರಭುರಾಜ್ ಶೆಟ್ಟರ್
ಕುಕನೂರು: ತಾಲೂಕಿನ ರಾವಣಕಿ ಗ್ರಾಮದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಆರ್‌ಎಂಪಿ ವೈದ್ಯ ಪ್ರಭುರಾಜ್ ಶೆಟ್ಟರ್ (47) ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಚಿಕಿತ್ಸೆಗಾಗಿ ಕ್ಲಿನಿಕ್‌ಗೆ ತೆರಳಿದ್ದ ವೇಳೆ ವೈದ್ಯರು ಇಂಜೆಕ್ಷನ್ ನೀಡಿದ ಬಳಿಕ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು 43 ವರ್ಷದ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಇಂಜೆಕ್ಷನ್ ನೀಡಿದ ನಂತರ ಪ್ರಜ್ಞೆ ಕುಂದಿತ್ತು ಎಂಬ ಅಂಶವೂ ದೂರಿನಲ್ಲಿ ಉಲ್ಲೇಖವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಂಖ್ಯೆ 113/2026 ದಾಖಲಿಸಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.
ಎಫ್‌ಐಆರ್ ದಾಖಲಾದ ಬಳಿಕ ಸೆ.19ರಂದು ಕೊಪ್ಪಳ ನಗರದ ಮನೆಯೊಂದರಲ್ಲಿ ಪ್ರಭುರಾಜ್ ಶೆಟ್ಟರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಮಹಿಳೆಯ ಹೇಳಿಕೆ, ವೈದ್ಯಕೀಯ ಪರೀಕ್ಷಾ ವರದಿ ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಕುಕನೂರು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಆರೋಪಗಳ ಸತ್ಯಾಸತ್ಯತೆ ತನಿಖೆ ಹಾಗೂ ನ್ಯಾಯಾಲಯದ ವಿಚಾರಣೆಯಲ್ಲಿ ನಿರ್ಧಾರವಾಗಬೇಕಿದೆ.