ಸಾಂದರ್ಭಿಕ ಚಿತ್ರ

ಕುಕನೂರು: ತಾಲೂಕಿನ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಟ್ಟಣದಿಂದ ಕೊಪ್ಪಳಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಯ ಮಸಬ ಹಂಚಿನಾಳ ಗ್ರಾಮದ ಸಮೀಪ ಬೈಕ್ ಮತ್ತು ಬುಲೆರೋ ಸರಕು ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಸಬ ಹಂಚಿನಾಳ ಗ್ರಾಮದ 44 ವರ್ಷದ ಗವಿಸಿದ್ದಪ್ಪ ಅಯ್ಯಪ್ಪ ಬನ್ನಿಕೊಪ್ಪ ಎಂದು ಗುರುತಿಸಲಾಗಿದೆ.

ಗವಿಸಿದ್ದಪ್ಪ ಅವರು ಕುಕನೂರಿನಿಂದ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ, ಕೊಪ್ಪಳದಿಂದ ಕುಕನೂರು ಕಡೆಗೆ ಬರುತ್ತಿದ್ದ ಬುಲೆರೋ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇನ್ನೊಂದು ಅಪಘಾತ ಬಳ್ಳಾರಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ತಳಕಲ್ ಗ್ರಾಮದ ಸಮೀಪ ಸಂಭವಿಸಿದೆ. ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಒಬ್ಬ ಯುವಕ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎರಡೂ ಅಪಘಾತ ಪ್ರಕರಣಗಳು ಕುಕನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ