ಕೊಪ್ಪಳ ಜಿಲ್ಲೆಯಲ್ಲಿ ಬೆಳೆ ಹಾನಿ ಖುದ್ದು ಪರಿಶೀಲಿಸಿದ ಸಚಿವ ಶಿವರಾಜ್ ತಂಗಡಗಿ
ರೈತರಿಗೆ ಅನ್ಯಾಯವಾಗದಂತೆ ಕ್ರಮ: ಸಚಿವ ಶಿವರಾಜ ತಂಗಡಗಿ
ಕೊಪ್ಪಳ : ಸಚಿವ ಶಿವರಾಜ ಎಸ್. ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸೂಚನೆಯಂತೆ ಎಲ್ಲಾ ಸಚಿವರು ತಮ್ಮ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದು, ತಾವು ಮೂರು ದಿನಗಳ ಕಾಲ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮುಂಗಾರು ಬೆಳೆಗಳ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದರು.
ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಳೆ ಹಾನಿಯ ಪ್ರಮಾಣ, ಕೈಗೊಂಡಿರುವ ಕ್ರಮಗಳು ಹಾಗೂ ರೈತರಿಗೆ ನೀಡಬೇಕಾದ ಪರಿಹಾರದ ಕುರಿತು ಪರಿಶೀಲನೆ ನಡೆಸಲಾಗುವುದು. ಬರ ಘೋಷಣೆಗೆ ಸಂಬಂಧಿಸಿದಂತೆ ಯಾವುದೇ ರೈತನಿಗೂ ಅನ್ಯಾಯವಾಗದಂತೆ ಕ್ರಮವಹಿಸಿ, ಅಗತ್ಯ ವರದಿಯನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಗಂಗಾವತಿ ತಾಲೂಕಿನ ವೆಂಕಟಗಿರಿ ಹೋಬಳಿ ವ್ಯಾಪ್ತಿಯ ಬಂಡ್ರಾಳ ಗ್ರಾಮಕ್ಕೆ ಭೇಟಿ ನೀಡಿ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿಯನ್ನು ವೀಕ್ಷಿಸಿದರು. ಬಂಡ್ರಾಳ ಗ್ರಾಮದ ರೈತ ಹನುಮಮ್ಮ ನಾಯಕ ಅವರ ಜಮೀನಿನಲ್ಲಿ ಬೆಳೆದ ಸಜ್ಜಿ ಬೆಳೆಯನ್ನು ಪರಿಶೀಲಿಸಿದರು.
ಇದೇ ವೇಳೆ ಗಡ್ಡಿ ಗ್ರಾಮದ ರೈತರು ಮಳೆಯ ಕೊರತೆಯಿಂದ ಮೆಕ್ಕೆಜೋಳ ಬೆಳೆ ಸಂಪೂರ್ಣ ಹಾನಿಗೊಳಗಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ, ಕೊಪ್ಪಳ ಸಹಾಯಕ ಆಯುಕ್ತರಾದ ಮೆಹಬೂಬ ಜಿಲಾನಿ, ಜಿಪಂ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಗಂಗಾವತಿ ಡಿವೈಎಸ್ಪಿ ಜೆ ಎಸ್ ನ್ಯಾಮಗೌಡರ, ಜಂಟಿ ಕೃಷಿ ನಿರ್ದೇಶಕರಾದ ಕೃಷ್ಣಮೂರ್ತಿ, ಜಂಟಿ ತೋಟಗಾರಿಕಾ ನಿರ್ದೇಶಕರಾದ ಕೃಷ್ಣ ಉಕ್ಕುಂದ, ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ಕುಲಕರ್ಣಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಯ್ಯ, ಕೆವಿಕೆಯ ರಾಘವೇಂದ್ರ ಯಲಿಗಾರ, ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಡಾ.ಬದ್ರಿ ಪ್ರಸಾದ, ಗಂಗಾವತಿಯ ಸಹಾಯಕ ಕೃಷಿ ನಿರ್ದೇಶಕರಾದ ಡಾ.ಅಭಿಲಾಷ ಸಿ ಸೇರಿದಂತೆ ಇತರರು ಇದ್ದರು.
ಗ್ರಾಮಸ್ಥರಿಂದ ಸ್ವಾಗತ :
ಸಂಪುಟ ದರ್ಜೆ ಸಚಿವರಾದ ಮೇಲೆ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಸಚಿವರಾದ ಶಿವರಾಜ ತಂಗಡಗಿ ಅವರಿಗೆ ಬಂಡ್ರಾಳ ಹಾಗೂ ಗಡ್ಡಿ ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಸಂಭ್ರಮಿಸಿದರು.