ಕೊಪ್ಪಳ: ಗಂಗಾವತಿ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾರ್ಯವೈಖರಿ, ಸ್ವಚ್ಛತೆ ಹಾಗೂ ವೈದ್ಯಕೀಯ ಸೇವೆಗಳನ್ನು ಕಂಡು ಸಚಿವ ಯು.ಟಿ. ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಯಚೂರಿಗೆ ತೆರಳುವ ಮಾರ್ಗ ಮಧ್ಯೆ ಗಂಗಾವತಿಯ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಆಸ್ಪತ್ರೆಯಲ್ಲಿನ ಸೌಲಭ್ಯಗಳು, ಸ್ವಚ್ಛತೆ ಹಾಗೂ ವೈದ್ಯರು ಮತ್ತು ಸಿಬ್ಬಂದಿಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಸರಕಾರಿ ಆಸ್ಪತ್ರೆಯಲ್ಲಿಯೇ ಖಾಸಗಿ ಆಸ್ಪತ್ರೆಗಳಿಗೆ ಸಮಾನವಾದ ಸೌಲಭ್ಯಗಳು ಹಾಗೂ ಗುಣಮಟ್ಟದ ವೈದ್ಯಕೀಯ ಸೇವೆಗಳು ದೊರೆಯುತ್ತಿರುವುದನ್ನು ಕಂಡು ಸಚಿವರು ಸಂತಸ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ಸುಮಾರು 450 ಹೆರಿಗೆಗಳು ನಡೆಯುತ್ತಿರುವುದನ್ನು ಉಲ್ಲೇಖಿಸಿ, ವೈದ್ಯರು ಮತ್ತು ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದರು.

ಆಸ್ಪತ್ರೆಯ ಉತ್ತಮ ಕಾರ್ಯನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ವೈದ್ಯರು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ, ಗಂಗಾವತಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾರ್ಯವೈಖರಿಯನ್ನು ಮಾದರಿಯಾಗಿ ಪರಿಗಣಿಸುವುದಾಗಿ ತಿಳಿಸಿದರು.

ಸರಕಾರಿ ಆಸ್ಪತ್ರೆಗಳಲ್ಲಿಯೂ ಉತ್ತಮ ಸೌಲಭ್ಯಗಳು ಮತ್ತು ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸಬಹುದು ಎಂಬುದಕ್ಕೆ ಗಂಗಾವತಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉತ್ತಮ ಉದಾಹರಣೆಯಾಗಿದೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor