ಕೃಷಿ ಭೂಮಿಯಲ್ಲಿ ಸೋಲಾರ್, ವಿಂಡ್‌ಮಿಲ್ ಬೇಡ : ಕೇಂದ್ರಕ್ಕೆ ಶಾಸಕ ರಾಯರಡ್ಡಿ ಮನವಿ
ಕುಕನೂರು: ಸೋಲಾರ್ ಪ್ಯಾನಲ್, ವಿಂಡ್‌ಮಿಲ್ ಹಾಗೂ ವಿದ್ಯುತ್ ಉತ್ಪಾದನಾ ಯೋಜನೆಗಳಿಗಾಗಿ ರೈತರ ಕೃಷಿ ಭೂಮಿಯನ್ನು ಬಳಸುವುದನ್ನು ನಿಲ್ಲಿಸಿ, ಲಭ್ಯವಿರುವ ಸರ್ಕಾರಿ ಭೂಮಿಯಲ್ಲಿಯೇ ಇಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಬೇಕು ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಆಗ್ರಹಿಸಿದ್ದಾರೆ.
ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಯಲಬುರ್ಗಾ ವಿಧಾನಸಭಾ ಕ್ಷೇತ್ರವು ಕೃಷಿ ಆಧಾರಿತ ಪ್ರದೇಶವಾಗಿದ್ದು, ಇಲ್ಲಿನ ಜನರು ಸಂಪೂರ್ಣವಾಗಿ ಕೃಷಿಯನ್ನೇ ಅವಲಂಬಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ನೀರಾವರಿ ಸೌಲಭ್ಯ ವಿಸ್ತರಣೆಯಾಗುವ ಸಾಧ್ಯತೆ ಇರುವುದರಿಂದ ಕೃಷಿ ಭೂಮಿಯನ್ನು ಸಂರಕ್ಷಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಐದಾರು ವರ್ಷಗಳಿಂದ ಯಲಬುರ್ಗಾ, ರೋಣ, ಕುಷ್ಟಗಿ, ಗದಗ ಹಾಗೂ ಹುನಗುಂದ ತಾಲೂಕುಗಳಲ್ಲಿ ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ಸೋಲಾರ್, ವಿಂಡ್‌ಮಿಲ್ ಹಾಗೂ ವಿದ್ಯುತ್ ಪ್ರಸರಣ ಯೋಜನೆಗಳು ಜಾರಿಯಾಗುತ್ತಿವೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ರೈತರ ಜಮೀನು ಸ್ವಾಧೀನ ಹಾಗೂ ಪರಿಹಾರ ನಿಗದಿಪಡಿಸುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದು, ರಾಜ್ಯ ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರೈತರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಆಮಿಷಗಳಿಗೆ ಒಳಗಾಗದೆ ತಮ್ಮ ಕೃಷಿ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಬಾರದು. ಭೂಮಿ ನೀಡುವಂತೆ ಒತ್ತಡ ಅಥವಾ ಕಿರುಕುಳ ಎದುರಾದರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತರ ಹಿತಾಸಕ್ತಿಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸೋಲಾರ್ ಹಾಗೂ ವಿಂಡ್‌ಮಿಲ್ ಯೋಜನೆಗಳನ್ನು ರೈತರ ಕೃಷಿ ಭೂಮಿಯಲ್ಲಿ ಅನುಷ್ಠಾನಗೊಳಿಸುವುದನ್ನು ನಿಲ್ಲಿಸಿ, ಕೇವಲ ಸರ್ಕಾರಿ ಭೂಮಿಯಲ್ಲಿಯೇ ಜಾರಿಗೊಳಿಸುವಂತೆ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಶಾಸಕ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.