ಕೊಪ್ಪಳ | ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ
ಕೊಪ್ಪಳ : ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊಪ್ಪಳದಲ್ಲಿ ಬಲ್ದೊಟಾ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ನ ಕಾರ್ಖಾನೆ ವಿಸ್ತರಣೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿಗಳಿಗೆಮನವಿ ಸಲ್ಲಿಸಲಾಯಿತು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಕಾರ್ಖಾನೆ ನಿರ್ಮಾಣಕ್ಕೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಕೊಪ್ಪಳ ಜಿಲ್ಲೆಯ ಸರ್ವ ಪಕ್ಷಗಳ ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ನಿವಾಸದಲ್ಲಿ ಜರುಗಿತು, ನಂತರ ಈ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿತು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅವರು, ಕಾರ್ಖಾನೆ ವಿಸ್ತರಣೆಗೆ ಕೈಗೊಳ್ಳುತ್ತಿರುವ ಸಿದ್ಧತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.