ಪ್ರಧಾನಿ, ಗೃಹ ಸಚಿವರು ರಾಜೀನಾಮೆ ನೀಡಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ
ಎಸ್‌ಐಆರ್ ವಿರುದ್ಧ ಕೊಪ್ಪಳದಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ
ಕೊಪ್ಪಳ : ವಿಶೇಷ ತೀವ್ರ ಮತದಾರರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ವ್ಯವಸ್ಥೆಯ ಕುರಿತು ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್. ತಂಗಡಗಿ ಆಗ್ರಹಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚುನಾವಣಾ ಆಯುಕ್ತರ ರಾಜೀನಾಮೆ ಮಾತ್ರ ಸಾಕಾಗುವುದಿಲ್ಲ. ಚುನಾವಣಾ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಆತಂಕವಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಬಿಜೆಪಿ ಶಾಸಕರೊಬ್ಬರು ಕೆಲವು ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವಂತೆ ಪತ್ರ ಬರೆದಿರುವುದಾಗಿ ಹೇಳಲಾಗಿರುವ ವಿಷಯವೂ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಸಚಿವರು ಹೇಳಿದರು.
ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಇವಿಎಂ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಬಿಜೆಪಿ ಸಂಸದ ಗೋವಿಂದ ಕಾರಜೋಳ ಅವರು ಜ್ಞಾನೇಶ್ ಕುಮಾರ್ ಅವರ ಬಗ್ಗೆ ಮಾಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ತಂಗಡಗಿ, “ಹಾಗಾದರೆ ನಾಗೇಂದ್ರ ಅವರು ಏನು? ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದೇಕೆ?” ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ನೆರವಾಗಿದೆ ಎಂದು ಹೇಳಿದ ಅವರು, ಬಿಜೆಪಿ ವಿರುದ್ಧವೂ ಟೀಕೆಗಳನ್ನು ಮಾಡಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.