×
Ad

ಮಳೆ ಕೊರತೆ | ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಆಗ್ರಹ

Update: 2026-07-16 17:54 IST

ಕೊಪ್ಪಳ : ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಪ್ಪಳ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ್ ಇ. ಗುಳಗಣ್ಣವರ ಆಗ್ರಹಿಸಿದ್ದಾರೆ.

ಈ ಕುರಿತು ಗುರುವಾರ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಜುಲೈ 13ರ ವರದಿ ಪ್ರಕಾರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಆತಂಕಕಾರಿ ಪ್ರಮಾಣದ ಮಳೆ ಕೊರತೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಗಂಗಾವತಿ ತಾಲೂಕಿನಲ್ಲಿ ಶೇ.75, ಕೊಪ್ಪಳದಲ್ಲಿ ಶೇ.46, ಯಲಬುರ್ಗಾದಲ್ಲಿ ಶೇ.38, ಕುಷ್ಟಗಿಯಲ್ಲಿ ಶೇ.32, ಕುಕನೂರಿನಲ್ಲಿ ಶೇ.27, ಕಾರಟಗಿಯಲ್ಲಿ ಶೇ.25 ಹಾಗೂ ಕನಕಗಿರಿಯಲ್ಲಿ ಶೇ.22ರಷ್ಟು ಮಳೆ ಕೊರತೆ ಉಂಟಾಗಿದೆ. ಜುಲೈ 7ರಿಂದ 13ರವರೆಗೆ ಕಾರಟಗಿಯಲ್ಲಿ ಶೇ.93 ಹಾಗೂ ಗಂಗಾವತಿಯಲ್ಲಿ ಶೇ.91ರಷ್ಟು ಮಳೆ ಕೊರತೆ ದಾಖಲಾಗಿದ್ದು, ಜುಲೈ 13ರಂದು ಜಿಲ್ಲೆಯಾದ್ಯಂತ ಶೂನ್ಯ ಮಳೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಳೆ ಅಭಾವದಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಕೊಪ್ಪಳ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಅಗತ್ಯ ಪರಿಹಾರ ಕ್ರಮಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮುಂದುವರಿಸಿದರೆ ಬಿಜೆಪಿ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ನವೀನಕುಮಾರ್ ಇ. ಗುಳಗಣ್ಣವರ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News