ಸಿದ್ದರಾಮಯ್ಯ ಅವರ ಸರಕಾರದಿಂದ ಜನಪರ ಆಡಳಿತ : ಶಾಸಕ ರಾಯರೆಡ್ಡಿ
ಕುಕನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನೀಡುತ್ತಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು.
ತಾಲ್ಲೂಕಿನ ಹರಿಶಂಕರ ಬಂಡಿ, ಚೆನ್ನಪ್ಪನಹಳ್ಳಿ, ಕೋನಾಪುರ, ಬಳಗೇರಿ, ರಾವಣಕಿ, ಬೂದುಗುಂಪ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಸರ್ವ ಜನಾಂಗದ ಅಭಿವೃದ್ಧಿ ಚಿಂತನೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಬೇಕು–ಬೇಡಗಳನ್ನು ಅರಿತು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಪ್ರಸ್ತುತ 4.34 ಕೋಟಿ ಜನರಿಗೆ ಉಚಿತ ಪಡಿತರ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ವಾರ್ಷಿಕ ಸುಮಾರು 30 ಸಾವಿರ ಕೋಟಿ ರೂ. ಆರ್ಥಿಕ ನೆರವು ತಲುಪುತ್ತಿದೆ. 1.69 ಕೋಟಿ ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ಹಾಗೂ 98 ಲಕ್ಷ ಮಕ್ಕಳಿಗೆ ಶಿಕ್ಷಣದಡಿ ಉಚಿತ ಪಠ್ಯಪುಸ್ತಕ, ಬಟ್ಟೆ ಮತ್ತು ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕೃಷಿ ಕ್ಷೇತ್ರಕ್ಕೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, 36 ಲಕ್ಷ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಜನಪರ ಯೋಜನೆಗಳಿಗೆ ಪ್ರತಿ ವರ್ಷ ಸುಮಾರು 1 ಲಕ್ಷ 12 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ರಾಯರೆಡ್ಡಿ ಹೇಳಿದರು.
ಈ ಸಂದರ್ಭದಲ್ಲಿ ಚಿಕೇನಕೊಪ್ಪ, ಯಾರೇಹಂಚಿನಾಳ, ಮಂಡಳಿಗೇರಿ ರಸ್ತೆಗಳ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಭಿವೃದ್ಧಿ ಕಾಮಗಾರಿಗಳು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಯಂಕಣ್ಣ ಯಾರಾಶಿ, ಹನುಮಂತಗೌಡ ಪಾಟೀಲ್ ಚಂಡೂರ, ಕೇರಿಬಸಪ್ಪ ನಿಡಗುಂದಿ, ಮಂಜುನಾಥ್ ಕಡೆಮನಿ, ಪಂಚ ಗ್ಯಾರಂಟಿ ಯೋಜನೆ ತಾಲೂಕು ಘಟಕದ ಅಧ್ಯಕ್ಷ ಸಂಗಮೇಶ್ ಗುತ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಸಂತೋಷ ಪಾಟೀಲ್ ಬಿರಾದಾರ್, ತೋಟಗಾರಿಕೆ ಇಲಾಖೆ ಅಧಿಕಾರಿ ಲಿಂಗಾರೆಡ್ಡಿ, ಜೆಸ್ಕಾ, ಪಶುಪಾಲನೆ, ಶಿಕ್ಷಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.