ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಪಾದಯಾತ್ರೆ: ಸಚಿವ ಶಿವರಾಜ್ ತಂಗಡಗಿ
ಶಿವರಾಜ್.ಎಸ್. ತಂಗಡಗಿ
ಕಾರಟಗಿ: ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯವರು ಪಾದಯಾತ್ರೆ ಕೈಗೊಂಡಿದ್ದು, ಅದಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್.ಎಸ್. ತಂಗಡಗಿ ಅವರು ಹೇಳಿದ್ದಾರೆ.
ಕಾರಟಗಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿಜಕ್ಕೂ ಇದು ಪಶ್ಚಾತ್ತಾಪದ ಯಾತ್ರೆಯಾಗಿದೆ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು, ನಮ್ಮ ತಟ್ಟೆಯಲ್ಲಿನ ನೊಣ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಹಗರಣದ ಬಗ್ಗೆ ಬಿಜೆಪಿಯವರು ಮಾತನಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು ಯಾರು? ಆತ ಯಾರ ಸಂಬಂಧಿ ಎಂದು ಬಿಜೆಪಿಯವರು ಸ್ಪಷ್ಟಪಡಿಸಲಿ ಎಂದು ಸವಾಲೆಸೆದರು.
ತುಂಗಭದ್ರಾ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರದ ಮೇಲೆ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಬಿಜೆಪಿಯವರು ನೀರಿನ ವಿಚಾರದಲ್ಲಿ ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ. ರೈತರು ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು. ಎರಡು ವಾರದಲ್ಲಿ ಸಭೆ ನಡೆಸಿ ಕಾಲುವೆಗೆ ಹೆಚ್ಚು ನೀರು ಹರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರೈತರು ನಮಗೆ ಸಹಕರಿಸಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಇದೇ ವೇಳೆ ಮನವಿ ಮಾಡಿದರು.