ಬಿಜೆಪಿಗೆ ಮತ ಹಾಕಿದರೆ ಕಾಂಗ್ರೆಸ್ನ ಐದು ಗ್ಯಾರಂಟಿಗಳಿಗೆ ಕತ್ತರಿ: ಸಚಿವ ಶಿವರಾಜ ತಂಗಡಗಿ
ಕನಕಗಿರಿ: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಮತದಾರರು ಬಿಜೆಪಿಗೆ ಮತ ನೀಡಿದರೆ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ದೇವರಾಜ ಅರಸು ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮತ್ತು ರಾ.ಬ.ಕೊ. ವತಿಯಿಂದ 10 ಹಾಲು ಉತ್ಪಾದಕರ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.
ಮಹಿಳೆಯರ ಸ್ವಾವಲಂಬಿ ಬದುಕಿಗೆ ನೆರವಾಗಲು ರಾಜ್ಯದ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಚುನಾವಣೆಗೆ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಬಿಡದೆ, ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಸಮತೋಲನದಿಂದ ನಡೆಸಿಕೊಂಡು ಬರುತ್ತಿದೆ ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರ ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂಬುದನ್ನು ಮಾಹಿತಿ ಸಹಿತ ತಿಳಿಸುವಂತೆ ವಿರೋಧ ಪಕ್ಷದವರಿಗೆ ಸವಾಲು ಹಾಕಿದ ಅವರು, ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆ, ಪ್ರಜಾಸೌಧ, 100 ಹಾಸಿಗೆಗಳ ಆಸ್ಪತ್ರೆ ಹಾಗೂ ತಾಲೂಕು ಘೋಷಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ತಾನು ಕೈಗೊಂಡಿದ್ದೇನೆ ಎಂದರು.
ಸುಖಾಸುಮ್ಮನೆ ಯಾವುದೋ ವೃತ್ತದಲ್ಲಿ ನಿಂತು ನನ್ನನ್ನು ನಿಂದಿಸಿದರೆ ಸಾಲದು. ಕ್ಷೇತ್ರದ ಜನರು ನೀಡಿರುವ ಪ್ರೀತಿ ಮತ್ತು ಬೆಂಬಲದ ಋಣವನ್ನು ನಾನು ಎಂದಿಗೂ ತೀರಿಸಲು ಸಾಧ್ಯವಿಲ್ಲ ಎಂದು ಶಿವರಾಜ ತಂಗಡಗಿ ಹೇಳಿದರು.