ಯಲಬುರ್ಗಾ: ಭಕ್ತಶ್ರೇಷ್ಠ ಕನಕದಾಸರು ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾಜದಲ್ಲಿನ ಜಾತಿಭೇದ, ಅಸಮಾನತೆ ಹಾಗೂ ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತರು. ಅವರು ಸಾರಿದ ಸಮಾನತೆ, ಮಾನವೀಯತೆ ಮತ್ತು ಸಹಬಾಳ್ವೆಯ ತತ್ವಾದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಹಶೀಲ್ದಾರ್ ಮಹಾಂತಗೌಡ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ತಾಲೂಕು ಆಡಳಿತ, ಪಟ್ಟಣ ಪಂಚಾಯಿತಿ, ವಿವಿಧ ಇಲಾಖೆಗಳು ಹಾಗೂ ಹಾಲುಮತ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕದಾಸರು ಭಕ್ತಿಮಾರ್ಗದ ಮೂಲಕ ಸಮಾಜದಲ್ಲಿ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿದವರು. ತಮ್ಮ ದಾಸ ಸಾಹಿತ್ಯದ ಮೂಲಕ ಜನಸಾಮಾನ್ಯರಿಗೆ ಬದುಕಿನ ಮೌಲ್ಯ, ಭಕ್ತಿ, ಜ್ಞಾನ ಮತ್ತು ಸಾಮಾಜಿಕ ನ್ಯಾಯದ ಸಂದೇಶ ಸಾರಿದ್ದಾರೆ. ಅವರ ವಿಚಾರಧಾರೆಗಳು ಒಂದು ಕಾಲಕ್ಕೆ ಸೀಮಿತವಾಗದೆ ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ. ಆದ್ದರಿಂದ ಜಯಂತಿ ಆಚರಣೆಯ ಜತೆಗೆ ಅವರ ಸಾಹಿತ್ಯ ಮತ್ತು ಆದರ್ಶಗಳನ್ನು ಯುವಜನತೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದರು.

ಮುಖಂಡ ಬಸವಲಿಂಗಪ್ಪ ಭೂತೆ ಮಾತನಾಡಿ, ಕನಕದಾಸರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ ಅಸಮಾನತೆಯ ವಿರುದ್ಧ ಧ್ವನಿ ಎತ್ತಿ, ಭಕ್ತಿಯ ಮೂಲಕ ಸಮಾಜವನ್ನು ಒಗ್ಗೂಡಿಸಲು ಪ್ರಯತ್ನಿಸಿದರು. ಅವರ ದಾಸ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿದ್ದು, ಯುವಜನತೆ ಅವುಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ವೀರಣ್ಣ ಹುಬ್ಬಳ್ಳಿ, ಸಿ.ಎಚ್. ಪೊಲೀಸ್ ಪಾಟೀಲ, ಆನಂದ ಉಳ್ಳಾಗಡ್ಡಿ ಹಾಗೂ ಸಾವಿತ್ರಿ ಗೊಲ್ಲರ ಮಾತನಾಡಿ, ಕನಕದಾಸರ ಜೀವನ ಸಾಧನೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಸ್ಮರಿಸಿದರು. ಅವರು ಪ್ರತಿಪಾದಿಸಿದ ಸಮಾನತೆ, ಸಹಬಾಳ್ವೆ ಹಾಗೂ ಸೌಹಾರ್ದತೆಯ ಮೌಲ್ಯಗಳು ಇಂದಿನ ಸಮಾಜ ನಿರ್ಮಾಣಕ್ಕೆ ಅತ್ಯಂತ ಅಗತ್ಯವಾಗಿವೆ ಎಂದು ಅಭಿಪ್ರಾಯಪಟ್ಟರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ ಮಾತನಾಡಿ, ಕನಕದಾಸರ ಕೀರ್ತನೆಗಳು ಸಮಾಜಕ್ಕೆ ಉತ್ತಮ ಬದುಕಿನ ಮಾರ್ಗದರ್ಶನ ನೀಡುತ್ತವೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.

ಹಾಲುಮತ ಸಮಾಜದ ಅಧ್ಯಕ್ಷ ವೀರನಗೌಡ ಪಾಟೀಲ ಮಾತನಾಡಿ, ಕನಕದಾಸರು ಹಾಲುಮತ ಸಮಾಜದ ಹೆಮ್ಮೆಯ ಸಂತರಾಗಿದ್ದು, ಕನ್ನಡ ಸಾಹಿತ್ಯ ಹಾಗೂ ಭಕ್ತಿ ಪರಂಪರೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸಾಧನೆ ಯುವ ಸಮುದಾಯಕ್ಕೆ ಪ್ರೇರಣೆಯಾಗಿದ್ದು, ಸಮಾಜದ ಸಂಘಟನೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮಾರೆಪ್ಪ ದಾಸರ ತಂಡದವರಿಂದ ಕನಕದಾಸರ ಜನಪ್ರಿಯ ದಾಸಪದಗಳ ಕೀರ್ತನೆ ನಡೆಯಿತು. ಭಕ್ತಿಗೀತೆಗಳ ಗಾಯನ ಹಾಗೂ ದಾಸ ಸಾಹಿತ್ಯದ ಸಂಗೀತ ಕಾರ್ಯಕ್ರಮ ನೆರೆದಿದ್ದವರ ಗಮನ ಸೆಳೆಯಿತು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಬಬಲಾದ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ, ಮುಖಂಡರಾದ ಹನುಮಂತಪ್ಪ ಹನುಮಾಪೂರ, ರೇವಣೆಪ್ಪ ಹಿರೇಕುರಬರ, ಬಾಲಚಂದ್ರ ಸಾಲಭಾವಿ, ದೊಡ್ಡಯ್ಯ ಗುರುವಿನ, ಎಂ.ಎಫ್. ನಧಾಪ, ಸಂಗಣ್ಣ ಟೆಂಗಿನಕಾಯಿ, ಶೇಖರ ಗುರಾಣಿ, ಸಿದ್ದಪ್ಪ ಕಟ್ಟಿಮನಿ, ಛತ್ರಪ್ಪ ಛಲವಾದಿ, ಕರಿಯಪ್ಪ ಗುರಿಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಹಾಲುಮತ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ