ಯಲಬುರ್ಗಾ | ಪ್ರತಿಮೆ ಸ್ಥಾಪನೆ, ರಸ್ತೆ ನಾಮಕರಣಕ್ಕೆ ಸರಕಾರದ ಮಾರ್ಗಸೂಚಿ ಪಾಲನೆ ಕಡ್ಡಾಯ: ನಾಗೇಶ
ಯಲಬುರ್ಗಾ: ಪಟ್ಟಣದಲ್ಲಿ ಗಣ್ಯ ವ್ಯಕ್ತಿಗಳ ಪ್ರತಿಮೆ ಸ್ಥಾಪನೆ ಹಾಗೂ ರಸ್ತೆ, ಅಡ್ಡರಸ್ತೆ, ವೃತ್ತ ಮತ್ತು ಬಡಾವಣೆಗಳಿಗೆ ಹೆಸರು ನಾಮಕರಣ ಅಥವಾ ಮರುನಾಮಕರಣ ಮಾಡುವ ಸಂದರ್ಭದಲ್ಲಿ ಸರ್ಕಾರದ ನಿಗದಿತ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಗೇಶ ಸೂಚಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರದ ನಿಯಮಗಳ ಪ್ರಕಾರ ಸಾರ್ವಜನಿಕ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧವಿದೆ. ಪ್ರತಿಮೆ ಸ್ಥಾಪಿಸಲು ಆಸಕ್ತಿ ಹೊಂದಿರುವ ಸಂಘ-ಸಂಸ್ಥೆಗಳು ತಮ್ಮ ಸ್ವಂತ ನಿವೇಶನದಲ್ಲಿ ಪ್ರತಿಮೆ ನಿರ್ಮಿಸಬೇಕು. ಅಲ್ಲದೆ, ಪ್ರತಿಮೆಯ ಭದ್ರತೆ ಹಾಗೂ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಸಂಬಂಧಪಟ್ಟ ಸಂಸ್ಥೆಗಳೇ ವಹಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಪಟ್ಟಣದ ರಸ್ತೆ, ಅಡ್ಡರಸ್ತೆ, ವೃತ್ತ ಹಾಗೂ ಬಡಾವಣೆಗಳಿಗೆ ಹೊಸದಾಗಿ ಹೆಸರು ನಾಮಕರಣ ಮಾಡುವ ಅಥವಾ ಈಗಿರುವ ಹೆಸರುಗಳನ್ನು ಮರುನಾಮಕರಣ ಮಾಡುವ ಮೊದಲು ಪಟ್ಟಣ ಪಂಚಾಯಿತಿ ಕೌನ್ಸಿಲ್ ಸಭೆಯಲ್ಲಿ ಠರಾವು ಅಂಗೀಕರಿಸಬೇಕು. ಬಳಿಕ ಸ್ಥಳೀಯ ಪತ್ರಿಕೆಗಳು ಹಾಗೂ ಸರ್ಕಾರಿ ಕಚೇರಿಗಳ ಸೂಚನಾ ಫಲಕಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸಲಹೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡುವುದು ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರಿಂದ ಸ್ವೀಕೃತವಾಗುವ ಸಲಹೆ ಹಾಗೂ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕವೇ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ ನಾಮಕರಣಗೊಂಡಿರುವ ಹೆಸರುಗಳನ್ನು ಬದಲಾಯಿಸಲು ಅಥವಾ ಹೊಸ ಹೆಸರುಗಳನ್ನು ಸೇರ್ಪಡೆಗೊಳಿಸಲು ಸರ್ಕಾರದ ಪೂರ್ವಾನುಮತಿ ಪಡೆಯುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಆದ್ದರಿಂದ ಪಟ್ಟಣದಲ್ಲಿ ಪ್ರತಿಮೆ ಸ್ಥಾಪನೆ, ರಸ್ತೆ ಹಾಗೂ ವೃತ್ತಗಳ ನಾಮಕರಣ ಮತ್ತು ಮರುನಾಮಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಹಾಗೂ ಸಂಬಂಧಪಟ್ಟವರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪಟ್ಟಣ ಪಂಚಾಯಿತಿಯೊಂದಿಗೆ ಸಹಕರಿಸಬೇಕು ಎಂದು ಮುಖ್ಯಾಧಿಕಾರಿ ನಾಗೇಶ ಮನವಿ ಮಾಡಿದ್ದಾರೆ.