ಯಲಬುರ್ಗಾ | ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬಗಳ ಆರ್ಥಿಕ ಸದೃಢತೆಗೆ ನೆರವು: ಸುಧೀರ್ ಕೊರ್ಲಹಳ್ಳಿ
ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಯಲಬುರ್ಗಾ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳ ಜೀವನಮಟ್ಟ ಸುಧಾರಣೆ ಹಾಗೂ ಕುಟುಂಬಗಳ ಆರ್ಥಿಕ ಸದೃಢತೆಗೆ ನೆರವಾಗುತ್ತಿವೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ನೆರವು ನೀಡುತ್ತಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪಿಸುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಜನರ ದೈನಂದಿನ ಜೀವನದ ಆರ್ಥಿಕ ಹೊರೆ ಕಡಿಮೆಯಾಗಿದ್ದು, ಕುಟುಂಬಗಳ ಆರ್ಥಿಕ ಏಳಿಗೆಗೆ ಸಹಕಾರಿಯಾಗಿದೆ. ಯೋಜನೆಗಳ ಅನುಷ್ಠಾನದಲ್ಲಿ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬರಗಾಲದ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಆಸರೆಯಾಗಿವೆ. ಯೋಜನೆಗಳ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕಲ್ಪಿಸುವಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಪ್ರಗತಿ :
ಗೃಹಲಕ್ಷ್ಮಿ ಯೋಜನೆಯಡಿ 57,745 ಫಲಾನುಭವಿಗಳಿಗೆ ಒಟ್ಟು 395 ಕೋಟಿ ರೂ. ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 39,382 ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು 2.29 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 27,805 ಫಲಾನುಭವಿಗಳಿಗೆ 40 ಕೋಟಿ ರೂ. ಹಾಗೂ ಯುವನಿಧಿ ಯೋಜನೆಯಡಿ 2,471 ಯುವಜನರಿಗೆ 7.29 ಲಕ್ಷ ರೂ. ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ತಾಪಂ ಇಒ ನೀಲಗಂಗಾ ಬಬಲಾದಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾದ ಸಂಗಮೇಶ ಗಡಾದ, ಹುಲಗಪ್ಪ ಬಂಡಿವಡ್ಡರ್, ಗವಿಸಿದ್ದಪ್ಪ ಚಂಡೂರು, ಓಬಳೆಪ್ಪ ಕುಲಕರ್ಣಿ, ಇಮಾಮ್ ಮೋತೆಖಾನ, ಸೋಮಪ್ಪ ಕಟ್ಟಿಮನಿ, ಬೀರಪ್ಪ ಗಾಣಧಾಳ, ಪುನೀತ್ ಕೊಪ್ಪಳ, ಅಧಿಕಾರಿಗಳಾದ ಮಲ್ಲಿಕಾರ್ಜುನ ಶಾಸ್ತ್ರಿಮಠ, ಶಿವಯೋಗಿ ಹೊಸಳ್ಳಿ, ಹನುಮಗೌಡ ಮಾಲಿಪಾಟೀಲ್, ಸುಜಾತ ಹಾಗೂ ಮಂಜುನಾಥ ನಂದಾಪುರು ಉಪಸ್ಥಿತರಿದ್ದರು.