×
Ad

Chikkaballapur | ಟಿಪ್ಪರ್–ಬೈಕ್ ನಡುವೆ ಢಿಕ್ಕಿ; ನಾಲ್ವರು ಸ್ಥಳದಲ್ಲೇ ಮೃತ್ಯು

Update: 2025-12-26 00:15 IST

ಚಿಕ್ಕಬಳ್ಳಾಪುರ : ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಜಿಲ್ಲಾಡಳಿತ ಭವನದ ಕೂಗಳತೆ ದೂರದ ಅಜ್ಜವಾರ ಬಳಿ ಗುರುವಾರ ರಾತ್ರಿ ಸುಮಾರು 9.30ರ ವೇಳೆಗೆ ಸಂಭವಿಸಿರುವುದಾಗಿ ವರದಿಯಾಗಿದೆ.

ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ನಂದೀಶ್, ನರಸಿಂಹ, ಅರುಣ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ನಾಲ್ವರೂ ಪರಸ್ಪರ ಸ್ನೇಹಿತರಾಗಿದ್ದು, ಚಿಕ್ಕಬಳ್ಳಾಪುರ ನಗರದಿಂದ ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಶಿಡ್ಲಘಟ್ಟ ಕಡೆಯಿಂದ ಚಿಕ್ಕಬಳ್ಳಾಪುರದತ್ತ ಅತಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ನಾಲ್ವರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಕೂಡಲೇ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯ ಪಿಎಸ್‌ಐ ಶರಣಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಾಗಿಸಲಾಯಿತು. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News